

ಉಡುಪಿ: ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಕೋಟ್ಪಾ-2003 ಕಾಯಿದೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವಜನತೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗಿ ತಮ್ಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಅರೋಗ್ಯ ಜೊತೆಗೆ ಭವಿಷ್ಯದ ಜೀವನವು ಹಾಳಾಗುತ್ತದೆ. ಶಾಲಾ-ಕಾಲೇಜುಗಳ ಆವರಣದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ ಸಹ ಆ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಮಾರಾಟ ಮಾಡುತ್ತಿರುವ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಸ್ಥಳಿಯ ಸಂಸ್ಥೆಗಳಿಗೆ ಕೂಡಲೇ ಶಿಫಾರಸು ಮಾಡಿ, ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ ಸಂದರ್ಭದಲ್ಲಿ ಮಾದಕ ವಸ್ತುಗಳಿಂದ ದೂರ ವಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಹೇಳಬೇಕು. ವಿದ್ಯಾರ್ಥಿಗಳಿಗೆ ಈ ಬಗ್ಗೆ ಪ್ರತಿಜ್ಞಾವಿಧಿಗಳನ್ನು ಪ್ರತಿ ತಿಂಗಳಿಗೊಮ್ಮೆ ಬೋಧಿಸಬೇಕು. ಅರಣ್ಯದ ಅಂಚಿನಲ್ಲಿ ಕೆಲವು ತೋಟಗಳಲ್ಲಿ, ಕೃಷಿ ಭೂಮಿಗಳಲ್ಲಿ ಅಥವಾ ಕಟ್ಟಡದ ಮೇಲ್ಛಾವಣಿಯ ಮೇಲೆ ಗಾಂಜಾ ಬೆಳೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನಿಗಾವಹಿಸಿ, ಅನಿರೀಕ್ಷಿತ ಭೇಟಿಗಳನ್ನು ಅಂತಹ ಅನುಮಾನದ ಸ್ಥಳಗಳ ವೀಕ್ಷಣೆ ಮಾಡಬೇಕು. ಈ ಬಗ್ಗೆ ವರದಿಗಳನ್ನು ನೀಡಬೇಕು ಎಂದು ಸೂಚನೆ ನೀಡಿದರು.
ಮಾದಕ ದ್ರವ್ಯ ವಸ್ತುಗಳು ಮೆಡಿಸಿನ್ ಹಾಗೂ ಚಿಕ್ಕ ಪಾರ್ಸೆಲ್ನಲ್ಲಿ ಅಂಚೆ ಮೂಲಕ ಸಾಗಾಟವಾಗುತ್ತಿದ್ದು, ಅಂಚೆ ಇಲಾಖೆಯವರು ಈ ಬಗ್ಗೆ ಅನುಮಾನ ಬಂದಂತಹ ಪಾರ್ಸೆಲ್ಗಳನ್ನು ವಾರಸುದಾರರ ಸಮ್ಮುಖದಲ್ಲಿ ತೆರೆದು ನೋಡಿ, ವಾರಸುದಾರರಿಗೆ ಹಸ್ತಾಂತರಿಸುವುದು ಸೂಕ್ತ. ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ಗಳಲ್ಲಿ ಸಿ.ಸಿ.ಟಿ.ವಿ ಆಳವಡಿಸುವುದು ಕಡ್ಡಾಯ ಎಂದು ಸೂಚನೆ ನೀಡಿದರು.
ಯುವಜನರು ಮಾದಕ ವ್ಯಸನದ ಪರೀಕ್ಷೆ ಮಾಡಿದ ಸಂದರ್ಭದಲ್ಲಿ 97 ಜನರು ಮಾದಕ ವ್ಯಸನ ಮಾಡಿರುವುದು ಕಂಡುಬಂದಿದೆ, ಇವರಲ್ಲಿ 90 ಜನರು ಮಣಿಪಾಲ ಭಾಗದವರೆ ಆಗಿದ್ದಾರೆ ಉಳಿದ 7 ಜನರು ಇತರೆ ಭಾಗದವರಾಗಿದ್ದು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯು ಇಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಸಾಧ್ಯವಾದಲ್ಲಿ ಅವರನ್ನು ಶಿಕ್ಷಣ ಸಂಸ್ಥೆಯಿಂದ ಹೊರಗಿಡುವುದು ಸೂಕ್ತ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಢಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಸರ್ಜನ್ ಡಾ. ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.