ಕೋಟ್ಪಾ ಕಾಯ್ದೆ ಉಲ್ಲಂಘಿಸುವ ಅಂಗಡಿ ಲೈಸನ್ಸ್ ರದ್ದುಪಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

DC meeting on Kotpa Act mandya
Published on

ಮಂಡ್ಯ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸಣ್ಣ ಅಂಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಮಾರಾಟ ಮಾಡುವ ಮೂಲಕ ಕೋಟ್ಪಾ ಕಾಯ್ದೆ ಉಲ್ಲಂಘನೆ ನಡೆಯುತ್ತದೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿಯಮಬಾಹಿರವಾಗಿ ತಂಬಾಕು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿದಾಗ ಕೇವಲ ದಂಡ ವಿಧಿಸುವುದರಿಂದ ಪ್ರಯೋಜನವಾಗುವುದಿಲ್ಲ. ಬದಲಿಗೆ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಅಂಗಡಿಗಳ ಪರವಾನಗಿ ರದ್ದು ಪಡಿಸಬೇಕು. ಇನ್ನು ಕೃಷಿ ಬೆಳೆಗಳ ನಡುವೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲು ಗಮನಹರಿಸಿ ಎಂದು ಸೂಚನೆ ನೀಡಿದರು.

ತಂಬಾಕು ಸೇವನೆ ಮಾಡುವುದು ಅಪಾಯಕಾರಿ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಶಾಲಾ ಮಕ್ಕಳ ಮೂಲಕ ಪತ್ರ ಅಭಿಯಾನ ಹಮ್ಮಿಕೊಳ್ಳಬೇಕು. ತಂಬಾಕು ಸೇವನೆ ಮಾಡುವವರ ಮನಃಪರಿವರ್ತನೆಯಾಗಬೇಕು. ಇದಕ್ಕಾಗಿ ಮಕ್ಕಳ ಮೂಲಕ ಅವರ ಕುಟುಂಬದಲ್ಲಿ ತಂಬಾಕು ಸೇವನೆ ಮಾಡುವವರಿಗೆ ಪತ್ರ ಬರೆಯಿಸಿ. ತಂಬಾಕು ಸೇವನೆಯಿಂದ ಜನರು ಹಲವಾರು ರೋಗಕ್ಕೆ ಒಳಗಾಗಿ ಮೃತಪಡುತ್ತಾರೆ. ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮ ಆಯೋಜಿಸಿ. ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್ಸ್ ಮೂಲಕ ತಿಳಿಸಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ, ಜಿಲ್ಲೆಯಲ್ಲಿ 45 ಕಡೆ ದಾಳಿ ನಡೆಸಿ ಕೋಟ್ಪಾ ಕಾಯ್ದೆಯಡಿ 609 ದೂರುಗಳನ್ನು ದಾಖಲು ಮಾಡಲಾಗಿದೆ. ಅಂತೆಯೇ 85,760 ರೂ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಾಬು, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಡಾ.ಕುಮಾರ್, ಡಿಡಿಪಿಐ ಶಿವರಾಮೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ಜಿಲ್ಲಾ ಸಂಯೋಜಕ ತಿಮ್ಮರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net