

ಮಂಡ್ಯ: ಜಿಲ್ಲೆಯಲ್ಲಿ ಸಾಂಸ್ಕೃತಿಕ ಹಾಗೂ ಇನ್ನಿತರೆ ಕಾರ್ಯಕ್ರಮಗಳಿಗೆ ವೇದಿಕೆಯಾಗಿರುವ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ ದುರಸ್ತಿ ಕಾಮಗಾರಿಯನ್ನು ಜ.8ರಿಂದ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಲಾಮಂದಿರ ದುರಸ್ತಿ ಬಗ್ಗೆ ಚರ್ಚಿಸುವ ಸಂಬಂಧ ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಮಂದಿರ ನಿರ್ವಹಣೆ ಮಾಡಲಾಗುತ್ತಿದೆ. ಕಾರ್ಯಕ್ರಮ ಆಯೋಜಿಸಲು ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಿ ಕಾಯ್ದಿರಿಸಲಾಗುತ್ತಿತ್ತು. ಆದರೆ ಜ.8ರಿಂದ ಕಾಮಗಾರಿ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮಕ್ಕೂ ಅವಕಾಶವಿರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.
ಆನ್‌ಲೈನ್ ಮೂಲಕ ಈಗಾಗಲೇ ಜ.8 ಹಾಗೂ ನಂತರದ ದಿನಗಳಿಗೆ ರಂಗಮಂದಿರ ಕಾಯ್ದಿರಿಸಿರುವವರಿಗೆ ಮಾಹಿತಿ ನೀಡಿ ಅವರಿಂದ ಪಡೆದಿರುವ ಶುಲ್ಕವನ್ನು ಹಿಂದಿರುಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ತಿಳಿಸಿದರು. 63 ಲಕ್ಷ ರೂ ವೆಚ್ಚದಲ್ಲಿ ವಿವಿಧ ದುರಸ್ತಿ ಕಾಮಗಾರಿ ನಡೆಸಲಾಗುತ್ತಿದ್ದು, ಕೆಲಸದಿಂದ ಗುಣಮಟ್ಟದಿಂದ ಕೂಡಿರಬೇಕು. ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುವ ರೀತಿ ವ್ಯವಸ್ಥೆಯಾಗಲಿದೆ ಎಂದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹರ್ಷ ಇತರರಿದ್ದರು.