

ಮಂಡ್ಯ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆ ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ವಿವಿಧ ಸಂಘ ಸಂಸ್ಥೆಯ ಮುಖಂಡರು ಸಮೀಕ್ಷೆಯ ಬಗ್ಗೆ ಸಮುದಾಯವರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿ ಮನೆ ಮನೆ ಸಮೀಕ್ಷೆ ನಡೆಯಲಿದೆ. ಗಣತಿದಾರರನ್ನಾಗಿ ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಸಮೀಕ್ಷೆಯನ್ನು ಆ್ಯಪ್‌ನಲ್ಲಿ ಭರ್ತಿ ಮಾಡಲಾಗುವುದು ಎಂದರು.
ಪ್ರತಿ ಹತ್ತು ಗಣತಿದಾರರಿಗೆ ಒಬ್ಬ ಸೂಪರ್‌ವೈಸರ್ ನೇಮಕ ಮಾಡಲಾಗಿದೆ. ಅವರಿಗೆ ತರಬೇತಿ ನೀಡಲಾಗಿದೆ. ಆ್ಯಪ್‌ನಲ್ಲಿ ಭರ್ತಿ ಮಾಡಬೇಕಿರುವುದರಿಂದ ತರಬೇತಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗುವುದು. ಕಾರಣಾಂತರಗಳಿಗೆ ಮನೆ- ಮನೆ ಸಮೀಕ್ಷೆಯ ಸಂದರ್ಭದಲ್ಲಿ ಸಮೀಕ್ಷೆಗೆ ಒಳಗಾಗದವರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ಭೇಟಿ ನೀಡಿ ಮಾಹಿತಿ ಕೊಡಬಹುದು. ಇದಲ್ಲದೇ ಮೇ 19 ರಿಂದ 23 ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶವಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಸಮೀಕ್ಷೆಯಲ್ಲಿ ಗಣತಿದಾರರು ತಾಂತ್ರಿಕವಾಗಿ ಹೆಚ್ಚಿನ ಜ್ಞಾನ ಹೊಂದಿರಬೇಕು ಎಂಬ ದೃಷ್ಟಿಯಿಂದ ತರಬೇತಿ ನೀಡಲಾಗಿದೆ ಎಂದರು. ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು, ಕಸ ಸಂಗ್ರಹಿಸುವ ವಾಹನದ ಧ್ವನಿವರ್ಧಕದ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು. ಮುಖ್ಯವಾಗಿ ನಗರ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸಮೀಕ್ಷೆಗೆ ಒಳಗಾಗಲು ಹಿಂಜರಿಯುತ್ತಾರೆ. ಆದ್ದರಿಂದ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಅವಕಾಶ ಇದೆ ಎಂಬುದರ ಬಗ್ಗೆ ಪ್ರಚಾರ ಕೊಡಬೇಕು. ಸಮೀಕ್ಷೆದಾರರು ಬೆಳಗ್ಗೆ 7 ಗಂಟೆಗೆ ಹೋಗುವುದು ಉತ್ತಮ. ಇದರಿಂದ ಕೆಲಸಕ್ಕೆ ತೆರಳುವವರಿಗೆ ಅನುಕೂಲವಾಗುತ್ತದೆ. ಪೌರ ಕಾರ್ಮಿಕರು, ಅಲೆಮಾರಿಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ ಎಂದು ಸಭೆಗೆ ಸಲಹೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್ ಉಪಸ್ಥಿತರಿದ್ದರು.