ಉಪಲೋಕಾಯುಕ್ತರಿಂದ ಪ್ರಕರಣಗಳ ವಿಚಾರಣೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

DC meeting regarding Lokayukta visit Mandya
Published on

ಮಂಡ್ಯ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಮೇ 28 ರಿಂದ 31ರವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಅಂತೆಯೇ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಅಪರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕರು, ಹಾಗೂ ತಹಸೀಲ್ದಾರ್ ಒಳಗೊಂಡಂತೆ ಸಮಿತಿ ರಚಿಸಲಾಗಿದೆ. ಅವರು ವಾಸ್ತವ್ಯ ಹೂಡುವ ಪ್ರವಾಸಿ ಮಂದಿರದಲ್ಲಿ ಸ್ವಚ್ಛತೆ ಕಾಪಾಡಬೇಕು. ಲೋಕಾಯುಕ್ತರ ಜತೆ ಆಗಮಿಸಲಿರುವ ಅಧಿಕಾರಿಗಳ ಪಟ್ಟಿಯನ್ನು ತೆಗೆದುಕೊಂಡು ಸೂಕ್ತ ಕೊಠಡಿಯ ವ್ಯವಸ್ಥೆ ಮಾಡಬೇಕು ಎಂದರು.

ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸಲಾಗುವುದು. ಭಾಗವಹಿಸುವ ಸಾರ್ವಜನಿಕರನ್ನು ಬ್ಯಾರಿಕೇಡ್ ವ್ಯವಸ್ಥೆಯ ಮೂಲಕ ವಿವಿಧ ಗುಂಪುಗಳಾಗಿ ರಚಿಸಿ ಆಸನ ವ್ಯವಸ್ಥೆ ಕಲ್ಪಿಸಲಾಗುವುದು. ಆನ್‌ಲೈನ್ ತಂತ್ರಾಂಶದಲ್ಲಿ ಸಾರ್ವಜನಿಕರ ವಿವರಗಳು ನೋಂದಣಿ ಮಾಡಲಾಗುವುದು ಎಂದು ಹೇಳಿದರು.

ಎಲ್ಲ ಗ್ರಾಮ ಪಂಚಾಯಿತಿ ಪಿಡಿಒ, ಉಪಲೋಕಾಯುಕ್ತರು ಆಗಮಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಬ್ಯಾನರ್ ಅಳವಡಿಸಬೇಕು. ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಯುವ ಸ್ಥಳದಲ್ಲಿ ಕಂಪ್ಯೂಟರ್ ಮತ್ತು ಆಪರೇಟರ್‌ಗಳು, ಇಂಟರ್‌ನೆಟ್, ಸ್ಟೆನೋಗ್ರಾಫರ್ ಇರಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ಪೌರಾಯುಕ್ತೆ ಪಂಪಶ್ರೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net