ರೈತರಿಗೆ ಬಾಕಿ ಹಣ ಪಾವತಿಯಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

DC meeting with farmers Mandya
Published on

ಮಂಡ್ಯ: ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡುವ ರೈತರಿಗೆ ನ್ಯಾಯಯುತವಾಗಿ ಹಣ ಪಾವತಿ ಮಾಡಬೇಕು. ಅದರಂತೆ ಈಗಾಗಲೇ ಕಬ್ಬು ಸರಬರಾಜು ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಾಕಿಯಿರುವ ಪಾವತಿಯನ್ನು ಶೀಘ್ರದಲ್ಲೇ ಮಾಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ಕಬ್ಬು ಸರಬರಾಜಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳು ರೈತರಿಗೆ ಸರಿಯಾಗಿ ಹಣ ಪಾವತಿ ಮಾಡುತ್ತಿರುವ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು. ಒಂದು ವೇಳೆ ರೈತರಿಗೆ ಹಣ ಪಾವತಿ ಮಾಡದೇ ಇರುವ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಲು ಕ್ರಮ ತೆಗೆದುಕೊಳ್ಳಬೇಕ ಎಂದು ಹೇಳಿದರು.

ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳು ಸರಿಯಾಗಿ ಹಣವನ್ನು ಪಾವತಿ ಮಾಡುತ್ತಿಲ್ಲ ಎನ್ನುವ ದೂರು ಹಲವು ರೈತರಿಂದ ಕೇಳಿ ಬರುತ್ತಿದೆ. ಕಬ್ಬು ಪೂರೈಕೆ ಮಾಡುವ ರೈತರಿಗೆ ಅಧಿಕೃತವಾಗಿ ನೀಡಬೇಕಾದ ಹಣವನ್ನು 14 ದಿನದೊಳಗೆ ತಪ್ಪದೇ ಸಕ್ಕರೆ ಕಾರ್ಖಾನೆಗಳು ನೀಡಬೇಕು. ಮತ್ತು ಹಣ ಪಾವತಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ವರದಿಯನ್ನು ಒದಗಿಸಬೇಕು. ಮುಖ್ಯವಾಗಿ ನಿಗದಿತ ದಿನದೊಳಗೆ ಹಣ ಪಾವತಿ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರೈತರನ್ನು ಪಾವತಿ ವಿಷಯವಾಗಿ ಅಲೆದಾಡಿಸಬಾರದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಸಹಾಯಕ ನಿರ್ದೇಶಕ ಶ್ರೀನಿವಾಸ್, ವ್ಯವಸ್ಥಾಪಕಿ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ರೈತ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net