

ಮಂಡ್ಯ: ಮಳವಳ್ಳಿ ತಾಲೂಕಿನಲ್ಲಿ ಕಲುಷಿತ ಆಹಾರ ಸೇವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು ಹಲವರು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೆಲ ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಅದರಂತೆ ಸರ್ಕಾರದ ಆಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ ಯಾವುದೇ ಕಾರಣಕ್ಕೂ ಹೊರಗಿನ ವ್ಯಕ್ತಿ ಹಾಗೂ ಸಂಸ್ಥೆಯಿಂದ ಆಹಾರ ಪಡೆಯುವಂತಿಲ್ಲ. ಇಂತಹ ಯಾವುದಾದರೂ ದೂರು ಬಂದಲ್ಲಿ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಡಿಸಿ ಡಾ.ಕುಮಾರ, ವಸತಿ ಶಾಲೆಗಳಿಗೆ ಹೊರಗಿನಿಂದ ಆಹಾರ ಪಡೆಯಬಾರದರು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.
ಅಂತೆಯೇ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ವ್ಯವಸ್ಥೆಗಳು, ಮಕ್ಕಳಿಗೆ ನೀಡಲಾಗುತ್ತಿರುವ ಆಹಾರ ಕುರಿತು ವರದಿ ನೀಡಲು ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಮಳವಳ್ಳಿ ತಾಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ಕಲುಷಿತ ಆಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಮೇಘಾಲಯದ 22 ವಿದ್ಯಾರ್ಥಿಗಳು 1 ರಿಂದ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಗುಣಮುಖರಾದ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು. ಮಾತ್ರವಲ್ಲದೆ ಬಾಲಮಂದಿರದಲ್ಲಿ ಅವರಿಗೆ ವಾಸ್ತವ್ಯ ಹಾಗೂ ವೈದ್ಯರ ಸಲಹೆಯಂತೆ ಆಹಾರ ಒದಗಿಸಲಾಗುವುದು ಎಂದು ವಿವರಿಸಿದರು.
ಮುಖ್ಯವಾಗಿ ಮೇಘಾಲಯ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯಿಂದ ವ್ಯವಸ್ಥೆ ಮಾಡಬೇಕು. ಇದಲ್ಲದೆ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ವೈದ್ಯರ ಸಲಹೆ ಹಾಗೂ ಪಾಲಕರ ಒಪ್ಪಿಗೆ ಪಡೆದು ಪರೀಕ್ಷೆ -1 ಬರೆಯಲಿ. ಇಲ್ಲವಾದಲ್ಲಿ ಪರೀಕ್ಷೆ-2 ಬರೆಯಲು ವ್ಯವಸ್ಥೆ ಮಾಡಿಕೊಡಬೇಕು. ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ವಿದ್ಯಾರ್ಥಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು. ಈ ಪ್ರಕ್ರಿಯೆ ಮುಗಿದ ನಂತರ ಅಲ್ಲಿನ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳು ಮಕ್ಕಳ ಹಾಗೂ ಪಾಲಕರ ಆಧಾರ್‌ಕಾರ್ಡ್ ಗುರುತಿನ ಚೀಟಿಯೊಂದಿಗೆ ಆಗಮಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ಪತ್ರ ನೀಡಿ ನಂತರ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಇನ್ನು ಮೇಘಾಲಯ ರಾಜ್ಯದ ವಿದ್ಯಾರ್ಥಿಗಳನ್ನು ಗೋಕುಲ ಶಾಲೆಗೆ ದಾಖಲೆ ಮಾಡುವ ಸಂದರ್ಭದಲ್ಲಿ ನೀಡಿರುವ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿದರು.
ಶೈಕ್ಷಣಿಕ ವರ್ಷ ಅಂತ್ಯವಾಗುತ್ತಿದ್ದು, ಗೋಕುಲ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸ್ಥಳೀಯ ವಿದ್ಯಾರ್ಥಿಗಳ ಪಾಲಕರ ಸಭೆ ನಡೆಸಿ. ಬಳಿಕ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತಂದು ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿ. ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯಿಂದಲೂ ಸಿಬ್ಬಂದಿ ನಿಯೋಜಿಸಿ. ಇನ್ನೊಂದು ಹಂತದಲ್ಲಿ ಶಾಲೆಗೆ ನೋಟಿಸ್ ನೀಡುವ ಕೆಲಸ ನಡೆಯುತಿರಲಿ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಸಂದರ್ಭದಲ್ಲಿ ಬೇರೆ ದಾನಿಗಳು ಆಹಾರ ನೀಡುವುದಾಗಿ ತಿಳಿಸುವುದು. ಶಾಲೆಯ ಅಡಳಿತ ಮಂಡಳಿ ಅವರನ್ನು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು.
ಗೋಕುಲ ವಿದ್ಯಾಸಂಸ್ಥೆಗೆ ಪರವಾನಗಿ ನೀಡುವಾಗ ಅಥವಾ ನವೀಕರಣ ಮಾಡುವ ಸಂದರ್ಭದಲ್ಲಿ ಪರಿಶೀಲನೆ ಮಾಡಿದ ಅಧಿಕಾರಿಯ ವಿವರ ಒದಗಿಸಬೇಕು. ಮುಖ್ಯವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರವಾನಗಿ ನವೀಕರಣ ಅಥವಾ ಪರವಾನಗಿ ನೀಡುವ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಮಾತನಾಡಿ, ಮಕ್ಕಳ ಆರೋಗ್ಯದ ಮೇಲೆ ಈಗಾಗಲೇ ನಿಗಾ ವಹಿಸಲು ಸಿಬ್ಬಂದಿಯನ್ನು ಮಿಮ್ಸ್‌ಗೆ ನಿಯೋಜಿಸಲಾಗಿದೆ. ಬಾಲಕರ ಬಾಲಮಂದಿರದಲ್ಲಿ ಸ್ಥಳಾವಕಾಶ ಕಡಿಮೆಯಾಗುವುದರಿಂದ ಪಕ್ಕದ ಕಟ್ಟಡದಲ್ಲಿ ಮಕ್ಕಳಿಗೆ ಬೇಕಿರುವ ವ್ಯವಸ್ಥೆಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೇಘಾಲಯ ರಾಜ್ಯದ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಪೀಟರ್ ಸುನ್, ರುಡಿ ಕ್ರಿಯಲ್, ಡಿಡಿಪಿಐ ಶಿವರಾಮೇಗೌಡ, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಸುಮಿತ್ರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ ಇತರರಿದ್ದರು.