ಅಪಘಾತ ತಡೆಗೆ ಕ್ರಮ ಕೈಗೊಳ್ಳುವಂತೆ ಡಿಸಿ ಸೂಚನೆ

IMG20240823192041.jpg
Published on

ಬೆಳಗಾವಿ: ನಗರ ಸೇರಿ ಜಿಲ್ಲೆಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವಂತಹ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಅಪಘಾತ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾಮಟ್ಟದ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶಾದ್ಯಂತ ಅಪಘಾತ ಪ್ರಮಾಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನಿಗಾ ವಹಿಸಿದೆ. ಆದ್ದರಿಂದ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗುವ ಜತೆಗೆ ತಮಗೆ ನಿಗದಿಪಡಿಸಿದ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು.

ಯಮನಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ, ನಗರದ ಗೋಗಟೆ ವೃತ್ತ ಹಾಗೂ ಕಾಲೇಜು ರಸ್ತೆಗಳಲ್ಲಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ಸ್ಥಳಗಳನ್ನು ಪರಿಶೀಲಿಸಿ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ ಮೂರು ವರ್ಷಗಳಲ್ಲಿ ಆದಂತಹ ಅಪಘಾತಗಳ ಸಂಖ್ಯೆ, ಅಪಘಾತದಿಂದ ಮೃತರ ಸಂಖ್ಯೆ ಹಾಗೂ ಬ್ಲ್ಯಾಕ್ ಸ್ಪಾಟ್‌ಗಳ ಕ್ರೋಡೀಕೃತ ವರದಿ ಸಲ್ಲಿಸಲು ತಿಳಿಸಿದರು.

ರಾಜ್ಯ ಹೆದ್ದಾರಿಗಳಲ್ಲಿ ನಿರಂತರ ಪೊಲೀಸ್ ಗಸ್ತು, ಅಪಘಾತವಾದಂತಹ ಸಂದರ್ಭದಲ್ಲಿ ಕೂಡಲೇ ಆರೋಗ್ಯ ಸೇವೆ ಒದಗಿಸಲು ಆಂಬುಲೆನ್ಸ್ ಹಾಗೂ ಹತ್ತಿರದ ಆಸ್ಪತ್ರೆಗಳನ್ನು ಗುರುತಿಸಲು ತಿಳಿಸಿದರು.

ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾತನಾಡಿ, ಅನುಮತಿಯಿಲ್ಲದೆ ವಾಹನಗಳ ಮಾಡಿಫೈ ಮಾಡಿದಂತಹ ವಾಹನಗಳ ವಿರುದ್ಧ ಕ್ರಮಕ್ಕೆ ಸೂಚಿಸಿದರು. ಶಾಲಾ-ಕಾಲೇಜುಗಳ ಬಳಿ ಝಿಬ್ರಾ ಕ್ರಾಸಿಂಗ್ ಗುರುತು ಮಾಡಬೇಕು. ನಗರ ಹಾಗೂ ಕಾಂಟೋನ್ಮೆಂಟ್ ವ್ಯಾಪ್ತಿಯ ರಸ್ತೆಗಳ ದುರಸ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಪ್ರಸ್ತುತ ಮಾಹೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿವೆ. ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳು ಗಮನ ಹರಿಸುವಂತೆ ತಿಳಿಸಿದರು. ಹೆದ್ದಾರಿ ಅಥವಾ ಜಿಲ್ಲಾ ಮುಖ್ಯರಸ್ತೆಗೆ ಕೂಡು ರಸ್ತೆಗಳಿರುವ ಕಡೆಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸರಿಯಾಗಿ ಕಾಣಿಸಲು ಅನುಕೂಲವಾಗುವಂತೆ ಗಿಡಗಂಟೆಗಳು ಅಥವಾ ಪೊದೆಯನ್ನು ಕತ್ತರಿಸಬೇಕು ಎಂದರು.

ಸಂಚಾರ ನಿಯಮ ಉಲ್ಲಂಘಿಸಿ ರದ್ದಾಗಿರುವ ಚಾಲನಾ ಪರವಾನಗಿಗಳ ವಿವರ ಒದಗಿಸುವ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶ್ರುತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ. ಸೊಬರದ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕೋಣಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿ ಸಮಿತಿ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net