ಎಫ್‍ಎ ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ

DC madam photo
Published on

ಗದಗ: 2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು  ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.  ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.  

ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮಂಗಳವಾರ 2023-24 ನೇ ಸಾಲಿನ ಹಿಂಗಾರು ಹಂಗಾಮಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು  ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‍ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 5 ಕ್ವಿಂಟಲ್ ನಂತೆ ಗರಿಷ್ಟ 15 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‍ಗೆ ರೂ.5800/- ರಂತೆ ಬೆಲೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ ದಿನಾಂಕ 1-7-2024 ರನುಸಾರ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದ್ದು, ರೈತರು ನೋಂದಣಿ ಕಾಲಾವಧಿಯನ್ನು ಆದೇಶದ ದಿನಾಂಕದಿಂದ  45 ದಿನಗಳವರೆಗೆ  ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ  ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು  ಜರುಗಿಸಲಾಗುವುದು ಎಂದರು.

ಜಿಲ್ಲೆಯ 10 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.  

ಸಭೆಯಲ್ಲಿ  ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ , ಸಹಕಾರಿ ಸಂಘಗಳ ಇಲಾಖೆಯ  ಕೆ.ಓ.ಎಫ್. ವ್ಯವಸ್ಥಾಪಕರು  ಹಾಜರಿದ್ದರು.  

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಯನ್ವಯ ಜಿಲ್ಲೆಯ 10 ಕಡೆಗಳಲ್ಲಿ ಕುಸುಬೆ ಖರೀದಿ ಕೇಂದ್ರಗಳು : ಗದಗ ತಾಲೂಕು- ಬಳಗಾನೂರ,ಹೊಂಬಳ, ಮುಳಗುಂದ; ಶಿರಹಟ್ಟಿ ತಾಲೂಕು- ರಣತೂರ, ಮಾಗಡಿ,  ರೋಣ ತಾಲೂಕು-  ಅಬ್ಬಿಗೇರಿ, ಸೂಡಿ, ನಿಡಗುಂದಿ ; ಮುಂಡರಗಿ- ಬರದೂರ;   ನರಗುಂದ- ಕಣಕಿಕೊಪ್ಪ.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net