

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನ.30ರಂದು ವಿಜೃಂಭಣೆಯಿಂದ ಕನಕ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದರು.
ಮೆರವಣಿಗೆಗೆ ಮೆರಗು ನೀಡಲು ವಿವಿಧ ಕಲಾತಂಡಗಳ ಭಾಗವಹಿಸಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ಭವನ ತಲುಪಲಿದೆ. ಕನಕದಾಸರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ. ಅವರ ತತ್ವ ಮತ್ತು ಆದರ್ಶ ಎಲ್ಲರೂ ಅನುಸರಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯ್‌ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಆನಂದ್‌ಕುಮಾರ್, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಕೆ.ಎಚ್.ನಾಗರಾಜು, ಮುಖಂಡರಾದ ದೊಡ್ಡಯ್ಯ, ಮಹೇಶ್, ಶ್ರೀನಿವಾಸ್ ಇತರರಿದ್ದರು.