

ವಿಜಯವಾಣಿ ಸುದ್ದಿಜಾಲ ಉಡುಪಿ
ಜಿಲ್ಲೆಯಲ್ಲಿ ಹೆಚ್ಚು ಕೈಗಾರಿಕಾ ಘಟಕ ಸ್ಥಾಪಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗ ಅವಕಾಶ ಲಭಿಸುವಂತೆ ಕಾರ್ಯಪ್ರವೃತ್ತರಾಗಬೇಕು. ಕೈಗಾರಿಕೆ ಪ್ರಾರಂಭಿಸಲು ಮುಂದೆ ಬರುವ ಉದ್ಯಮಿಗಳಿಗೆ ಅಗತ್ಯವಿರುವ ಮಾಹಿತಿ, ಎಲ್ಲ ರೀತಿಯ ಮೂಲ ಸೌಕರ್ಯವುಳ್ಳ ಕೈಗಾರಿಕಾ ಪ್ರದೇಶ ನಿರ್ಮಿಸಲು ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜೂನ್ 26ರಂದು ಆಯೋಜಿಸಿದ್ದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯ ಡಿಎಲ್ಎಂಸಿ ಸಭೆಯಲ್ಲಿ ಮಾತನಾಡಿದರು.
ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕರೆ, ಕೆರೆಬೆಟ್ಟುವಿನಲ್ಲಿ 38.75 ಎಕರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕರೆ ಪ್ರದೇಶವಿದೆ. ಅಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಿಸಲು ಭೂ ಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿ. ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗಿಲ್ಲ. ಅದನ್ನು ಆದ್ಯತೆಯ ಮೇಲೆ ಕೂಡಲೇ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾಧ್ಯಕ್ಷ ಹರೀಶ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ನಾಯ್ಕ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ 2496.23 ಕೋಟಿ ರೂ. ವಹಿವಾಟು ಆಗಿತ್ತು. ಆದರೆ, 2024-25ನೇ ಸಾಲಿನಲ್ಲಿ 1930.33 ಕೋಟಿ ರೂ. ಆಗಿದೆ. 2023-24ನೇ ಸಾಲಿನಲ್ಲಿ ಮೀನು ಉತ್ಪನ್ನ 107989.57 ಮೆ.ಟನ್ ರಫ್ತಾಗಿ 1726.25 ಕೋಟಿ ರೂ. ವಹಿವಾಟಾಗಿತ್ತು. 2024-25ನೇ ಸಾಲಿನಲ್ಲಿ ಕೇವಲ 76531.09 ಮೆ.ಟನ್ ರಫ್ತಾಗಿ 1084.79 ಕೋಟಿ ರೂ. ವಹಿವಾಟಾಗಿದೆ. ರಫ್ತು ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಬೇಕು. ಈರೀತಿ ಇಳಿಕೆಯಾಗಬಾರದು. ಉದ್ದಿಮೆದಾರರಿಗೆ ಮೀನುಗಾರಿಕಾ ಇಲಾಖೆಯವರು ಎಲ್ಲ ಸಹಕಾರ ನೀಡಿ, ರಫ್ತು ಪ್ರಮಾಣ ಹೆಚ್ಚಿಸಲು ಮುಂದಾಗಬೇಕು ಎಂದು ಡಿಸಿ ಸ್ವರೂಪಾ ತಾಕೀತು ಮಾಡಿದರು.
ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮೂಲ ಮಂಜೂರಾತಿದಾರರು ಅನ್ಯರಿಗೆ ಲೀಸ್ ಆಧಾರದ ಮೇಲೆ ನಿವೇಶನ ನೀಡಿದ್ದಾರೆ. ಅವರು ಆರ್ಎಂಸಿ ಘಟಕ ಪ್ರಾರಂಭಿಸಲು ಅನುಮತಿ ಪಡೆಯದೆ ಚಟುವಟಿಕೆ ನಡೆಸುತ್ತಿದ್ದಾರೆ. ಅದರಿಂದ ವಾಯು-ಜಲ ಮಾಲಿನ್ಯ ಸೇರಿದಂತೆ ಇನ್ನಿತರ ಸಮಸ್ಯೆ ಉಂಟಾಗಿವೆ. ಅವುಗಳಿಗೆ ಕಡಿವಾಣ ಹಾಕಬೇಕು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೀಡಿರುವ ಅನುಮತಿ ರದ್ದುಪಡಿಸಬೇಕು. ಎಲ್ಲ ಉತ್ಪನ್ನಗಳ ರಫ್ತು ಹೆಚ್ಚಿಸಲು ರಫ್ತುದಾರರು ಹಾಗೂ ಇಲಾಖಾ ಅಧಿಕಾರಿಗಳ ಸಭೆ ಆಯೋಜಿಸಿ ಎಂದು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಡಿಸಿ ಆದೇಶಿಸಿದರು.
ಈಗಾಗಲೇ ಕೈಗಾರಿಕಾ ಘಟಕ ಪ್ರಾರಂಭಿಸಲು ನಿವೇಶನ ನೀಡಿದ್ದರೂ ಸಹ ಯೋಜನೆ ಅನುಷ್ಠಾನ ಆಗದೆ ಸ್ಥಳೀಯರಿಗೆ ಉದ್ಯೋಗ ಲಭಿಸುತ್ತಿಲ್ಲ. ನಿವೇಶನ ಪಡೆದವರು ತ್ವರಿತವಾಗಿ ಕೈಗಾರಿಕಾ ಘಟಕ ಸ್ಥಾಪಿಸಬೇಕು. ಇಲ್ಲದಿದ್ದಲ್ಲಿ ಅಂತಹವರ ಮಂಜೂರಾದ ನಿವೇಶನ ವಾಪಾಸ್ ಪಡೆದು ಇತರರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಡಾ. ಸರೋಜಿನಿ ಮಹಿಷಿ ವರದಿಯನ್ವಯ ಕೈಗಾರಿಕಾ ಘಟಕಗಳಲ್ಲಿ ಮೊದಲು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. | ಸ್ವರೂಪಾ ಟಿ.ಕೆ. ಉಡುಪಿ ಜಿಲ್ಲಾಧಿಕಾರಿ.