

ವಿಜಯಪುರ: ಚಡಚಣ ತಾಲೂಕಿನ ವಿವಿಧ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಕ್ರೀಡಾಂಗಣಕ್ಕೆ ನಿಗದಿಪಡಿಸಿದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸ್ಥಳ ಪರಿಶೀಲನಾ ನಂತರ ಚಡಚಣ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ, ಗ್ರಂಥಾಲಯ ಕಟ್ಟಡ ಕಾಮಗಾರಿ, ಶೌಚಗೃಹ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಅಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಡಚಣದ ತಾಲೂಕು ಕಚೇರಿಯಲ್ಲಿ ಅಧಿಕಾರಿ, ಸಿಬ್ಬಂದಿ ಜೊತೆ ಸಭೆ ನಡೆಸಿ, ದೀರ್ಘಕಾಲ ವಿಲೇವಾರಿಗೊಳ್ಳದೇ ಇರುವ ಕಡತಗಳನ್ನು ಆದ್ಯತೆ ಮೇರೆಗೆ ವಿಲೇವಾರಿಗೊಳಿಸಲು, ಆಧಾರ್ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರ್‌ದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಕಡತಗಳ ವಿಳಂಬಕ್ಕೆ ಅವಕಾಶ ನೀಡದೇ ಶೀಘ್ರವಾಗಿ ವಿಲೇವಾರಿಗೆ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಉಪವಿಭಾಗಾಧಿಕಾರಿ ಆಬೀದ್ ಗದ್ಯಾಳ, ಚಡಚಣ ತಹಸೀಲ್ದಾರ್ ಎಸ್.ಬಿ. ಇಂಗಳೆ, ಎಡಿಎಲ್‌ಆರ್ ರಾಜಶೇಖರ ಕಾಂಬ್ಳೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಉಪಸ್ಥಿತರಿದ್ದರು.