

ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಇದೇ ಪ್ರಥಮ ಬಾರಿಗೆ ‘ಸೆಕೆಂಡ್ ಪಿಯುಸಿ ಪೂರಕ ಪರೀಕ್ಷೆ-2’ ನ್ನು ಜಾರಿಗೊಳಿಸಿದ್ದು ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಆ.21ರಿಂದ ಸೆಪ್ಟೆಂಬರ್ 2ವರೆಗೆ ಪರೀಕ್ಷೆ ನಡೆಯಲಿದ್ದು, ಸುಗಮವಾಗಿ ನಡೆಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
ಪರೀಕ್ಷೆಗೆ 3188 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯ ಲಿದೆ. ಈಗಾಗಲೇ ದ್ವಿತೀಯ ಪಿಯುಸಿ ಮೊದಲನೇ ಪೂರಕ ಪರೀಕ್ಷೆ ಯಶಸ್ವಿಯಾಗಿವೆ. ಅದೇ ರೀತಿ 2ನೇ ಪೂರಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಬೇಕು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಪರೀಕ್ಷೆ ಮುಕ್ತ ಹಾಗೂ ನ್ಯಾಯಸಮ್ಮತವಿರಬೇಕು. ಕೇಂದ್ರಗಳ ಸುತ್ತ ಅಗತ್ಯ ಬಂದೋಬಸ್ತ್ ಕಲ್ಪಿಸಬೇಕು. ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸಬೇಕು ಎಂದು ಹೇಳಿದರು.
ಈ ಕಾರ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾತ್ರ ಸಂಬಂಧಿಸಿದ್ದಲ್ಲ. ಜಿಲ್ಲಾ, ತಾಲೂಕು ಆಡಳಿತ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯೂ ಆಗಿದೆ ಎಂದರು.
ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಚಿತ್ರದುರ್ಗದ ಬಾಲಕರ ಸರ್ಕಾರಿ ಪಪೂ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪಪೂ ಕಾಲೇಜು, ಚಳ್ಳಕೆರೆ ಸರ್ಕಾರಿ ಪಪೂ ಕಾಲೇಜು, ಹಿರಿಯೂರು ಸರ್ಕಾರಿ ಪಪೂ ಕಾಲೇಜು, ಹೊಸದುರ್ಗದ ಸರ್ಕಾರಿ ಪಪೂ ಕಾಲೇಜು, ಮೊಳಕಾಲ್ಮೂರು ಸರ್ಕಾರಿ ಪಪೂ ಕಾಲೇಜು, ಹೊಳಲ್ಕೆರೆ ಕೊಟ್ರನಂಜಪ್ಪ ಪಪೂ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಎಸ್‌ಪಿ ಕುಮಾರಸ್ವಾಮಿ, ಎಸಿಎಂ.ಕಾರ್ತೀಕ್, ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ತಹಸೀಲ್ದಾರರು ,ಪಪೂ ಕಾಲೇಜುಗಳ ಪ್ರಾಚಾರ್ಯರು ಪಾಲ್ಗೊಂಡಿದ್ದರು.