

ಮಂಡ್ಯ: ಗ್ರಾಮಾಂತರ ಪ್ರದೇಶದಲ್ಲಿ ಕೆಲಸ ನಿರ್ವಹಿಸಬೇಕಾದ ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಣಾಧಿಕಾರಿಗಳು ನಗರದಲ್ಲಿಯೇ ಠಿಕಾಣಿ ಹೂಡಿರುವ ಕುರಿತಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸಾರ್ವಜನಿಕರು ಮಾಹಿತಿ ನೀಡಿದರು.
ಜನಸಾಮಾನ್ಯರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ನಗರದ ತಾಲೂಕು ಕಚೇರಿಗೆ ಡಿಸಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳ ವರ್ತನೆ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬಂದವು. ಈ ಪೈಕಿ ಹಳ್ಳಿಯಲ್ಲಿ ಕೆಲಸ ಮಾಡಬೇಕಿರುವ ಅಧಿಕಾರಿಗಳು ನಗರದಲ್ಲಿಯೇ ಬಾಡಿಗೆ ರೂಂ ಪಡೆದು ಕಚೇರಿಯನ್ನಾಗಿ ಪರಿವರ್ತನೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿಬಂತು. ಮಾತ್ರವಲ್ಲದೆ ಹಳ್ಳಿಯ ಜನರು ತಮ್ಮ ಕೆಲಸಕ್ಕೆ ನಗರಕ್ಕೆ ಬರಬೇಕಾದ ಸ್ಥಿತಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿ, ನಗರದಲ್ಲಿ ಬಾಡಿಗೆ ರೂಂ ಪಡೆದು ಕೆಲಸ ಮಾಡುತ್ತಿರುವ ಅಧಿಕಾರಿಗಳ ಮಾಹಿತಿ ಸಂಗ್ರಹಿಸಿ ಶೀಘ್ರದಲ್ಲಿಯೇ ಕಳುಹಿಸುವಂತೆ ತಹಸೀಲ್ದಾರ್‌ಗೆ ಸೂಚನೆ ನೀಡಿದರು.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನುಗಳನ್ನು ಮಂಜೂರು ಮಾಡಿರುವುದು. ದಾಖಲೆಗಳು ಕಳವು ಆಗಿರುವುದು ಕಂಡುಬಂದಿದ್ದು, ತಕ್ಷಣ ಎಲ್ಲ ಮಾಹಿತಿಗಳು ಪರಿಶೀಲಿಸಿ ತಲುಪಿಸಬೇಕು. ಅಧಿಕಾರಿ ಮತ್ತು ನೌಕರರು ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕೆಂದು ತಾಕೀತು ಮಾಡಿದರು.
ಗ್ರಾಮ ಲೆಕ್ಕಾಧಿಕಾರಿ ಮತ್ತು ಕಂದಾಯ ನಿರೀಕ್ಷಣಾಧಿಕಾರಿಗಳು ನಿಯೋಜಿತ ಸ್ಥಳದಲ್ಲಿಯೇ ಕರ್ತವ್ಯ ನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಬೇಕು. ನಕಲಿ ಖಾತೆಗಳ ಬಗ್ಗೆ ಪರಿಶೀಲನೆ ನಡೆಸಿ, ಅರ್ಹ ನಿವೇಶನ ರಹಿತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.
ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಪ್ರಭಾರ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಇತರರಿದ್ದರು.