ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡುವ ಚರ್ಚೆ

h15-Rayanna Prasasti 5
Published on

ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಹೆಸರಿಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಸಚಿವ ಸಂಪುಟ ಸಭೆ ಕರೆದು ರ್ಚಚಿಸಲಿದ್ದಾರೆ. ನಂತರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭರವಸೆ ನೀಡಿದರು.

ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ನಿಮಿತ್ತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಏರ್ಪಡಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಕುರಿತು ಸಚಿವ ಎಂ.ಬಿ. ಪಾಟೀಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಶೀಘ್ರವೇ ನಾಮಕರಣಕ್ಕೆ ಅನುಮತಿ ಸಿಗುವ ವಿಶ್ವಾಸವಿದೆ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸೂರ್ಯಚಂದ್ರ ಇರುವವರೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರ ಚನ್ನಮ್ಮನವರ ಹೆಸರು ಚಿರಸ್ಥಾಯಿಯಾಗಿರಲಿದೆ. ಅವರ ಹೋರಾಟ, ತ್ಯಾಗ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುತ್ತವೆ ಎಂದರು.

ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ. ಸುಭಾಷ ಬಬ್ರುವಾಡ, ಶಿವಾನಂದ ಗೊಂಬಿ, ಡಾ. ಮಹಾಂತೇಶ ವೀರಾಪುರ, ಡಾ. ಶಿವಯೋಗಿ ತಡಸದಮಠ, ಮೆಹಬೂಬ ಅಲಿ ನದಾಫ್, ಪಿ.ಆರ್. ದೊಡ್ಡಮನಿ, ವೈಜನಾಥ ಬಿರಾದಾರ, ಬೀರಪ್ಪ ಅಣ್ವೇರ, ಎ.ಕೆ. ಮಧು, ಇತರರನ್ನು ಸನ್ಮಾನಿಸಲಾಯಿತು.

ಮನಸೂರು ರೇವಣಸಿದ್ಧೇಶ್ವರಮಠದ ಶ್ರೀ ಬಸವರಾಜ ದೇವರು ಸಾನ್ನಿಧ್ಯ ವಹಿಸಿದ್ದರು.

ಕ್ಷಮತಾ ಸೇವಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ, ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ, ಪ್ರಮುಖರಾದ ಶಿವಾನಂದ ಜೋಗಿನವರ, ಅನಿಲಕುಮಾರ ಪಾಟೀಲ, ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ತಾಲೂರ, ಪ್ರಭು ನವಲಗುಂದಮಠ, ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net