ಸಮರ್ಪಕ ನೀರು ಪೂರೈಕೆಗೆ ಡಿಸೆಂಬರ್ ಗಡುವು: ಸಚಿವ ಶಿವಾನಂದ ಪಾಟೀಲ ಸೂಚನೆ

Minister Shivanand Patil Meeting
Published on

ಹಾವೇರಿ: ಜಿಲ್ಲೆಯ ಕುಡಿಯುವ ನೀರು ಪೂರೈಕೆ ಹಾಗೂ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮುಂದಾಗಿದ್ದು, ಈ ಕುರಿತು ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ಜಿಲ್ಲೆಯ ಶಾಸಕರ ಸಮ್ಮುಖದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಕಾರ್ಯರೂಪಕ್ಕೆ ತರಬೇಕು. ಯಾವುದೇ ಕಾರಣಕ್ಕೂ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಗುತ್ತಿಗೆದಾರರಿಗೆ ಗಡುವು ಹಾಗೂ ಎಚ್ಚರಿಕೆ ನೀಡಿದರು.

ಜಿಲ್ಲಾ ಕೇಂದ್ರ ಹಾವೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಗಂಭೀರವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರಿಂದ ಅಂಡರ್ ಟೇಕಿಂಗ್ ಪಡೆಯಿರಿ. ಒಂದು ವೇಳೆ ವಿಫಲರಾದರೆ ಕಾನೂನು ಪ್ರಕಾರ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಬಹುಗ್ರಾಮ ಕುಡಿವ ನೀರು ಪೂರೈಕೆ ಯೋಜನೆಗೆ (ಹಂಸಭಾವಿ ಹಾಗೂ ಇತರ ಗ್ರಾಮಗಳು) ಅರಣ್ಯ ಇಲಾಖೆ ಅನುಮತಿ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದಾಗ, ಇದುವರೆಗೆ ಏಕೆ ಗಮನಕ್ಕೆ ತರಲಿಲ್ಲ? ಸಿಎಂ ಸಭೆ ಸಂದರ್ಭದಲ್ಲೂ ಈ ಮಾಹಿತಿ ನೀಡಲಿಲ್ಲ. ಇಂತಹ ಪ್ರಮಾದಗಳೂ ಕೂಡ ಯೋಜನೆ ವಿಳಂಬಕ್ಕೆ ಕಾರಣವಾಗುತ್ತವೆ. ಕಾಲಮಿತಿಯಲ್ಲಿ ಏಕೆ ಅನುಷ್ಠಾನ ಸಾಧ್ಯವಾಗಿಲ್ಲ ಎಂದು ಸಚಿವ ಪಾಟೀಲ ಪ್ರಶ್ನಿಸಿದರು.

ಅಗತ್ಯ ಪ್ರಮಾಣದ ಯಂತ್ರಗಳು ಮತ್ತು ಕಾರ್ವಿುಕರನ್ನು ಬಳಕೆ ಮಾಡದಿರುವುದೇ ಯೋಜನೆಗಳ ವಿಳಂಬಕ್ಕೆ ಪ್ರಮುಖ ಕಾರಣ. ಗುತ್ತಿಗೆದಾರರಿಗೆ ಹಲವು ಬಾರಿ ಸೂಚನೆ ನೀಡಿದರೂ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಜಿಪಂ ಸಿಇಒ ಅಕ್ಷಯ ಶ್ರೀಧರ ಹೇಳಿದರು.

ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗಳು, ಸರ್ವಜ್ಞ ಹಾಗೂ ಇತರ 88 ಕೆರೆ ತುಂಬಿಸುವ ಯೋಜನೆ, ಮೇಡ್ಲೇರಿ ಮತ್ತು ಇತರ 19 ಕೆರೆ ತುಂಬಿಸುವ ಯೋಜನೆ, ಬುಳ್ಳಾಪುರ, ಹಾಡೆ ಕೆರೆ ತುಂಬಿಸುವ ಯೋಜನೆ ಹಾಗೂ ಸ್ಥಳೀಯ ಸಂಸ್ಥೆಗಳ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಕೈಗೊಳ್ಳುತ್ತಿರುವ ಅಮೃತ 2-0 ಯೋಜನೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸರ್ಕಾರದ ಕಾರ್ಯದರ್ಶಿ ಎಲ್.ಕೆ. ಅತೀಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಹಾವೇರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಅಕ್ಷಯ ಶ್ರೀಧರ ಹಾಗೂ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಭಾಗವಹಿಸಿದ್ದರು.

ಕಮಿಷನರ್ ಅಮಾನತಿಗೆ ನಿರ್ದೇಶನ

ಕರ್ತವ್ಯಲೋಪ ಆರೋಪದ ಮೇಲೆ ಹಾವೇರಿ ನಗರಸಭೆ ಆಯುಕ್ತರನ್ನು ಅಮಾನತು ಮಾಡಿ ಎಂದು ಸಚಿವ ಶಿವಾನಂದ ಪಾಟೀಲ ನಿರ್ದೇಶನ ನೀಡಿದರು. ಹಾವೇರಿ ನಗರದಲ್ಲಿ ಬೇಸಿಗೆ ದಿನಗಳಲ್ಲಿ ಕುಡಿವ ನೀರಿನ ಸಮಸ್ಯೆ ಗಂಭೀರವಾಗಿದ್ದರೂ ಪರಿಹಾರಕ್ಕೆ ಕ್ರಮ ಕೈಗೊಂಡಿಲ್ಲ. ಮುಲ್ಲಾನ ಕೆರೆಗೆ ಕೊಳಚೆ ನೀರು ಹರಿಯುತ್ತಿದ್ದರೂ ನಿರ್ಲಕ್ಷ್ಯ ಮಾಡಿದ್ದಾರೆ. ಹಾವೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಬೇರೆಯವರಿಗೆ ಚಾರ್ಜ್ ಕೊಡಿ ಎಂದು ಸೂಚಿಸಿದ್ದರೂ ಪಾಲಿಸಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳಿಂದ ಉದ್ಘಾಟನೆ

ಹಾನಗಲ್ಲ ತಾಲೂಕಿನಲ್ಲಿ ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ಕೆರೆಗೆ ನೀರು ತುಂಬಿಸುವ ಎರಡು ಯೋಜನೆಗಳನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಟ್ರಯಲ್ ರನ್ ಮಾಡಿ ಎಲ್ಲ ಕೆರೆಗಳಿಗೆ ನೀರು ಹರಿಯುವುದನ್ನು ಖಚಿತಪಡಿಸಿಕೊಳ್ಳಬೇಕು. ನ್ಯೂನ್ಯತೆಗಳಿದ್ದರೆ ಸರಿಪಡಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net