ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

dc
ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಯಿತು. ಯುಕೆಪಿ ಡಿಜಿಎಂ ಎಸ್.ಪಿ.ಘಂಟಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಇತರರು ಇದ್ದರು.
Published on

ಬಾಗಲಕೋಟೆ: ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಹಾಗೂ ಗಣರಾಜ್ಯೋತ್ಸವ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪಥಸಂಚಲನ ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಎನ್‌ಸಿಸಿ ಕೆಡೆಟ್‌ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೊಲೀಸ್ ಇಲಾಖೆ, ತಹಸೀಲ್ದಾರ್ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. ಕಾರ್ಯಕ್ರಮಗಳ ಸಿದ್ಧತೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

ಸಂಪೂರ್ಣವಾಗಿ ಪ್ಲಾಸ್ಟಿಕ್ ಧ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಬಂಧಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು. ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರು, ಶಾಸಕರು, ಸಂಸದರು ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನ ಹಾಗೂ ತಾಲೂಕು ಭವನಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ರಾಷ್ಟ್ರಕವಿ ಕುವೆಂಪು ಅವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣತ ಕಲಾವಿದರಿಂದ ಹಾಡಿಸಲು ತಿಳಿಸಲಾಯಿತು. ಶಾಲೆ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಿಹರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆಯನ್ನು ಮಾಡುವಂತೆ ವಾಯವ್ಯ ರಾಜ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದರು.

ಸದರಿ ದಿನದಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಯಿತು.

ರಾಷ್ಟ್ರೀಯ ಕಾರ್ಯಕ್ರಮ ಆಗಿರುವುದರಿಂದ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಯುಕೆಪಿ ಡಿಜಿಎಂ ಎಸ್.ಪಿ.ಘಂಟಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ತಹಸೀಲ್ದಾರ್ ಅಮರೇಶ ಪಮ್ಮಾರ ಸೇರಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net