ಅದ್ದೂರಿ ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

10 yelandur 01
ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿದರು. ಜಯಪ್ರಕಾಶ್, ಮಹೇಶ್‌ಕುಮಾರ್, ರಾಜೇಶ್, ಕಾಂತರಾಜು, ವೈ.ಎಂ.ಮುರಳಿಕೃಷ್ಣ ಇದ್ದರು.
Published on

ಯಳಂದೂರು: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28 ರಂದು ತಾಲೂಕು ಆಡಳಿತ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಯಿತು.

ಈ ಸಂಬಂಧ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಂದು ಪಟ್ಟಣದ ತಾಲೂಕು ಕಚೇರಿ ಆವರಣದಿಂದ ವಿವಿಧ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಮೆರವಣಿಗೆ ಮೆರವಣಿಗೆ ಮಾಡುವುದು, ನಂತರ ಪಟ್ಟಣ ದಿವಾನ್ ಪೂರ್ಣಯ್ಯ ವಸ್ತುಸಂಗ್ರಹಾಲಯದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಜವಾಬ್ದಾರಿಯನ್ನು ವಹಿಸಲಾಯಿತು. ಆ ದಿನ ಪಟ್ಟಣವನ್ನು ಸ್ವಚ್ಛವಾಗಿಡಲು, ತಳಿರು, ತೋರಣಗಳಿಂದ ಅಲಂಕರಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಈ ಹಿಂದೆ ಕೋವಿಡ್‌ನಿಂದ ಸರಳವಾಗಿ ಜಯಂತಿ ಆಚರಣೆ ಮಾಡಲಾಗಿದೆ. ಈ ಬಾರಿ ಅದ್ದೂರಿಯಾಗಿ ಜಯಂತಿ ಮಾಡಲು ಪ್ರಗತಿಪರ ಸಂಘಟನೆಗಳು ಮನವಿ ಮಾಡಿವೆ. ಈ ಹಿನ್ನೆಲೆಯಲ್ಲಿ ಜಯಂತಿಯನ್ನು ಅದ್ದೂರಿ ಹಾಗೂ ಅಷ್ಟೇ ಅರ್ಥಪೂರ್ಣವಾಗಿ ನಡೆಸಬೇಕು. ಇದಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ಸ್ಪಂದಿಸಬೇಕು. ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಆಚರಣೆಯಲ್ಲಿ ಯಾವುದೇ ಲೋಪಗಳು ಆಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಸೀಲ್ದಾರ್ ಜಯಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ರಾಜೇಶ್, ಬಿಇಒ ಕಾಂತರಾಜು, ತಾಲೂಕು ನಾಯಕ ಮಂಡಳಿ ಅಧ್ಯಕ್ಷ ವೈ.ಎಂ.ಮುರುಳಿಕೃಷ್ಣ, ಪಪಂ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಮಹದೇವನಾಯಕ, ಮಂಜು, ಬಿ.ರವಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net