ಮೈಸೂರಿನಲ್ಲಿ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

Published on

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಒವೆಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು. ಅಂದು ಬೆಳಗ್ಗೆ 8ಕ್ಕೆ ಅರಮನೆ ಆವರಣದಲ್ಲಿ ಇರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪೂಜೆ ಸಲ್ಲಿಸುವರು. ನಂತರ ಓವಲ್ ಮೈದಾನದಲ್ಲಿ ಸಚಿವರು ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಮೆರವಣಿಗೆಯು ಅರಮನೆ ಆವರಣದಿಂದ ಹೊರಟು ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಲಿದೆ. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸಲಿವೆ. ಅಗತ್ಯ ಕಲಾ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಲಿದೆ. ಮೆರವಣಿಗೆಯಲ್ಲಿ 6 ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ ಎಂದರು.

ಆಹ್ವಾನ ಪತ್ರಿಕೆಯನ್ನು ಶಿಷ್ಟಾಚಾರ ಅನ್ವಯ ಮುದ್ರಿಸಿ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಂಘ ಸಂಸ್ಥೆಗಳಿಗೆ ವಿತರಿಸಲಾಗುವುದು. ಸಂಜೆ 6ಕ್ಕೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬದಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸಾಧಕರ ಆಯ್ಕೆಯಲ್ಲಿ ನಿರ್ದಿಷ್ಟ ಮಾನದಂಡ ಇಟ್ಟುಕೊಳ್ಳಬೇಕು. ಸಾಧಕರ ಆಯ್ಕೆಯಲ್ಲಿ ಕ್ರೀಡಾ ಕ್ಷೇತ್ರದ ಸಾಧಕರನ್ನು ಹೊರತು ಪಡಿಸಿ ಕನಿಷ್ಠ ವಯಸ್ಸನ್ನು ನಿಗದಿಪಡಿಸಬೇಕು. ಎಲ್ಲ ಸಂಘ ಸಂಸ್ಥೆಗಳ ಮುಖಂಡರಿಗೆ ಕನ್ನಡದ ಬ್ಯಾಡ್ಜ್ ಹಾಗೂ ಶಾಲು ನೀಡಬೇಕು. ಎಲ್ಲ ಅಂಗಡಿಗಳು ಹಾಗೂ ಮಳಿಗೆಗಳ ಬೋರ್ಡ್‌ಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಆಗಬೇಕು ಎಂದು ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರು ಒತ್ತಾಯಿಸಿದರು.

ಮರಗಳಿಗೆ ಪ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸುವುದನ್ನು ನಿಷೇಧಿಸಬೇಕು. ನಗರದಲ್ಲಿ ಏಕ ರೂಪ ಬೋರ್ಡ್ ಅಳವಡಿಸಲು ನಿರ್ದೇಶನ ನೀಡಬೇಕು. ಚಲನಚಿತ್ರ ಮಂದಿರಗಳಲ್ಲಿ ನವೆಂಬರ್ ಒಂದರಿಂದ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲು ಕ್ರಮ ವಹಿಸಬೇಕು ಎಂದು ಮನವ ಮಾಡಿದರು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ ಕೆ ಹರೀಶ್, ಕನ್ನಡ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net