ಅ.೧೭ರಂದು ವಾಲ್ಮೀಕಿ ಜಯಂತಿಗೆ ನಿರ್ಧಾರ

valmiki jayanthi
Published on

ಮಡಿಕೇರಿ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೧೭ ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಕಳೆದ ಬಾರಿಯಂತೆ ಈ ಬಾರಿಯೂ ಸಹ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಕಳೆದ ಬಾರಿ ಗಾಂಧಿ ಮೈದಾನದಿಂದ ಕಾವೇರಿ ಕಲಾಕ್ಷೇತ್ರದವರೆಗೆ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯು ಮೆರವಣಿಗೆಗೆ ಅವಕಾಶ ಮಾಡಬೇಕು. ರೈತರು, ಪೌರಕಾರ್ಮಿಕರು, ಮತ್ತು ಮಾಜಿ ಸೈನಿಕರನ್ನು ಸನ್ಮಾನಿಸುವಂತಾಗಬೇಕು ಎಂದು ಅಶೋಕ್ ಸಲಹೆ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಅ.೧೭ ರಂದು ನಾಡಿನ ಜೀವನನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ. ಹಾಗಾಗಿ ಮೆರವಣಿಗೆ ಇರುವುದಿಲ್ಲ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಗುರುತಿಸುವುದರ ಜೊತೆಗೆ ಕೆಪಿಎಸ್‌ಸಿ, ಯುಪಿಎಸ್‌ಸಿ ಮತ್ತಿತರ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಹುದ್ದೆಗೆ ಆಯ್ಕೆಯಾದವರನ್ನು ಗೌರವಿಸುವಂತಾಗಬೇಕು ಎಂದು ಸಲಹೆ ಮಾಡಿದರು.


ಸಮಾಜವು ಅಂತರ್ಜಾಲ ಯುಗದಲ್ಲಿ ಬದುಕುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದರು.


ಪ್ರಮುಖರಾದ ಚಂದನ್ ಮಾತನಾಡಿ, ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂಬಂಧಿಸಿದಂತೆ ಆಯಾಯ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಪಿಡಿಒಗಳಿಗೆ ಮಾಹಿತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಕುಡಿಯರ ಮುತ್ತಪ್ಪ ಮಾತನಾಡಿ, ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಆದಿವಾಸಿ ಜನರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಕೋರಿದರು.


ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಡಿವೈಎಸ್‌ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುಳ, ಪೌರಾಯುಕ್ತ ಎಚ್.ಆರ್.ರಮೇಶ್, ಪಂಚಾಯತ್ ರಾಜ್ ಇಇ ಜಿ.ಕೆ.ನಾಯ್ಕ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆರ್.ಕೃಷ್ಣಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net