

ಮೈಸೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಹೇಳಿದರು.
ದೇವರಾಜ ಅರಸ್ ಜಯಂತಿ ಆಚರಿಸುವ ಸಲುವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ದೇವರಾಜ ಅರಸ್ ಜಯಂತಿಯನ್ನು ಆ.20 ರಂದು ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗುವುದು. ಎಲ್ಲ ಸಮುದಾಯದವರು ಸೇರಿ ಜಯತಿಯನ್ನು ಆಚರಿಸೋಣ ಎಂದರು.
2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಿಲಯಾರ್ಥಿಗಳಿಗೆ ಕಾರ್ಯಕ್ರಮ ದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು. ಇದರಿಂದ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಿಂದ ದೇವರಾಜ ಅರಸ್ ಕುರಿತು ವಿಶೇಷ ಉಪನ್ಯಾಸ, ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ತಾಲೂಕು ಮಟ್ಟದಲ್ಲೂ ಜಯಂತಿ ಆಯೋಜಿಸಲಾಗುವುದು ಎಂದರು.
‘ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅರಸ್ ಕುರಿತು ಪಿಎಚ್‌ಡಿ ಮಾಡಿರುವವರನ್ನು ಗುರುತಿಸಿ ಗೌರವಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿಂದುಳಿದ ವರ್ಗದವರನ್ನು ಗುರುತಿಸಿ ದೇವರಾಜ್ ಅರಸ್ ಪ್ರಶಸ್ತಿ ಪ್ರದಾನ ಮಾಡಬೇಕು’ ಎಂದು ವಿವಿಧ ಸಂಘಟನೆಗಳ ಪ್ರಮುಖರು ಮನವಿ ಮಾಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಘವೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರ್ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹಾಗೂ ಇತರರು ಇದ್ದರು.