

ಮೈಸೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕೋವಿಡ್ ಸೋಂಕು ದೂರವಾಗಿ ಜನಜೀವನ ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ.
ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಕರೊನಾ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಅತ್ಯಂತ ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ನ.1 ರಂದು ಬೆಳಗ್ಗೆ 8.30ಕ್ಕೆ ಅರಮನೆ ಆವರಣದಲ್ಲಿರುವ ನಾಡದೇವತೆ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಪೂಜೆ ಸಲ್ಲಿಸುವರು. ನಂತರ 9ಕ್ಕೆ ಸಚಿವರು ಧ್ವಜಾರೋಹಣ ನೆರವೇರಿಸುವರು ಎಂದರು.
ಆಕರ್ಷಕ ಮೆರವಣಿಗೆ:
ಈ ಬಾರಿ ಆಕರ್ಷಕ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು. ಧ್ವಜಾರೋಹಣದ ನಂತರ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಪೆರೇಡ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮೆರವಣಿಗೆಯು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಪ್ರಾರಂಭಗೊಂಡು ಚಾಮರಾಜ ವೃತ್ತ, ಕೆ.ಆರ್. ವೃತ್ತ, ಸಯ್ಯಜಿರಾವ್ ರಸ್ತೆ, ಇರ್ವಿನ್ ರಸ್ತೆ ಮಾರ್ಗವಾಗಿ ಸಾಗಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣಕ್ಕೆ ಹಿಂತಿರುಗಲಿದೆ. ಮೆರವಣಿಗೆಯಲ್ಲಿ ಕಲಾತಂಡಗಳು, ಪೊಲೀಸ್ ಬ್ಯಾಂಡ್, ಮೌಂಟೆಡ್ ಪೊಲೀಸ್ ಹಾಗೂ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಅಲ್ಲದೆ ಶಾಲಾ, ಕಾಲೇಜು ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡು ಮೆರವಣಿಗೆಗೆ ಮೆರಗು ನೀಡಲಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮ, ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್, ವೈ.ಡಿ. ರಾಜಣ್ಣ, ವಿವಿಧ ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡ ಕಾವಲು ಸಮಿತಿ ಪದಾಧಿಕಾರಿಗಳು ಹಾಗೂ ಇತರರ ಇದ್ದರು.