ಕುವೆಂಪು ಮತ್ತು ಅಮರಶಿಲ್ಪಿ ಜಕಣಾಚಾರಿ ದಿನಾಚರಣೆಗೆ ನಿರ್ಧಾರ

27adarshkdga5
Published on

ಮಡಿಕೇರಿ: ಡಿ೨೯ ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಮತ್ತು ಜ೧ ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ನಗರದಲ್ಲಿ ಆಚರಿಸಲು ನಿರ್ಧರಿಸಲಾಯಿತು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.


ವಿಶ್ವ ಮಾನವ ದಿನಾಚರಣೆಯನ್ನು ನಗರದ ಕುವೆಂಪು ಪುತ್ಥಳಿ ಆವರಣದಲ್ಲಿ ಮತ್ತು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.


ಜಿ.ಪಂ.ಮಾಜಿ ಅಧ್ಯಕ್ಷ ಕೆ.ಪಿ.ಚಂದ್ರಕಲಾ ಮಾತನಾಡಿ, ಮಡಿಕೇರಿ ನಗರದಲ್ಲಿರುವ ಕುವೆಂಪು ಪುತ್ಥಳಿಯನ್ನು ನವೀಕರಿಸಬೇಕಿದೆ. ಆ ನಿಟ್ಟಿನಲ್ಲಿ ಪುತ್ಥಳಿಯನ್ನು ಎತ್ತರಿಸುವುದರ ಜತೆಗೆ, ಪ್ರತಿಮೆಯ ಮುಖವನ್ನು ರಸ್ತೆ ಕಡೆಗೆ ಮಾಡುವಂತಾಗಬೇಕು. ಈ ಸಂಬಂಧ ಸರ್ಕಾರದಿಂದ ಸಾಧ್ಯವಾದಷ್ಟು ಸಹಾಯಧನ ಕಲ್ಪಿಸಬೇಕು ಎಂದು ಮನವಿ ಮಾಡಿದರು.


ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ವಿಶ್ವ ಮಾನವ ದಿನಾಚರಣೆಗೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.


ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ವಿಶ್ವ ಮಾನವ ಕುವೆಂಪು ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು. ವಿಶ್ವ ಮಾನವ ಸಂದೇಶಗಳು ಎಲ್ಲೆಡೆ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಕುವೆಂಪುರವರು ರಚಿಸಿರುವ ಹಾಡು ಹಾಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.


ಧ್ವನಿಗೂಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ವೈಚಾರಿಕ ಹಾಗೂ ವೈಜ್ಞಾನಿಕ ಚಿಂತನೆಯನ್ನು ಒಳಗೊಂಡಿದೆ. ಅವರ ವಿಚಾರಧಾರೆಗಳನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಕೋರಿದರು.
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಂದು ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡುವುದು ಹಾಗೂ ಪ್ರೋತ್ಸಾಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶನ ಎಚ್.ಎನ್.ಸುಬ್ರಹ್ಮಣ್ಯ, ಸಮಾಜದ ಪ್ರಮುಖರಾದ ರತೀಶ್ ಆಚಾರ್ಯ, ರಘು ಆಚಾರ್ಯ, ಮೋಹನ್, ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net