ಅದ್ದೂರಿ ಗಣರಾಜ್ಯೋತ್ಸವ ಆಚರಿಸಲು ತೀರ್ಮಾನ

19SPT1
Published on

ಸೋಮವಾರಪೇಟೆ: ತಾಲೂಕು ಆಡಳಿತ ಹಾಗೂ ಇಲ್ಲಿನ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಜ.26ರಂದು ಪದವಿಪೂರ್ವ ಕಾಲೇಜು ಮೈದಾನದಲ್ಲಿ ಅದ್ದೂರಿ ಗಣರಾಜ್ಯೋತ್ಸವ ಆಚರಿಸುವಂತೆ ತೀರ್ಮಾನಿಸಲಾಯಿತು.

ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎಸ್.ಎನ್.ನರಗುಂದ್ ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಹಸೀಲ್ದಾರ್ ಎಲ್ಲ ಅಧಿಕಾರಿಗಳು ಖಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ತಿಳಿಸಿದರು.

ಧ್ವಜಾರೋಹಣ, ಮೈದಾನ ಸ್ವಚ್ಛತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿ, ಬೆಳಗ್ಗಿನ ಉಪಾಹಾರ, ಕವಾಯತು, ಕುಡಿಯುವ ನೀರು ಮತ್ತಿತರ ವ್ಯವಸ್ಥೆಯ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುವಂತೆ ಸೂಚಿಸಿದರು. ಮೈದಾನ ಸ್ವಚ್ಛತೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯವರು ಒಂದು ದಿನ ಮೊದಲೇ ಗಮನ ಹರಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇಬ್ಬರು ನಿವೃತ್ತ ಯೋಧರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರಾದ ಎಚ್.ಸಿ.ನಾಗೇಶ್, ಕವನ್ ಕಾರ್ಯಪ್ಪ, ಬಿ.ಇ.ಜಯೇಂದ್ರ, ಎಸ್.ಡಿ.ವಿಜೇತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು. ಶಾಲಾ ಕಾಲೇಜುಗಳ ಮುಖ್ಯಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net