

ಮಡಿಕೇರಿ: ನ.೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿಡುವಂತೆ ಪೌರಾಯುಕ್ತರು ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗೆ ಸೂಚಿಸಿದರು.
ವಾಟರ್ ಪ್ರೋಫ್ ವೇದಿಕೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸ್ವಲ್ಪ ಎತ್ತರ ಮಾಡುವಂತಾಗಬೇಕು. ಗಣ್ಯರು, ಅತಿಥಿಗಳು, ಮಾಧ್ಯಮದವರು ಇತರರು ಕುಳಿತುಕೊಳ್ಳಲು ಸೂಕ್ತ ಚೇರ್‌ಗಳನ್ನು ಅಳವಡಿಸಿ ಪೆಂಡಾಲ್ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಬೇರೆ ಬೇರೆ ಶಾಲೆಗಳಿಗೆ ಅವಕಾಶ ಮಾಡಬೇಕು. ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಹಾಡುಗಳನ್ನು ಮಾತ್ರ ಒಳಗೊಂಡಿರಬೇಕು. ಕನ್ನಡ ರಾಜ್ಯೋತ್ಸವ ಸಂದರ್ಭಕ್ಕೆ ತಕ್ಕಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.
ಸ್ವಾಗತ, ಸ್ತಬ್ಧಚಿತ್ರ, ಧ್ಜಜಾರೋಹಣ ಮತ್ತು ವೇದಿಕೆ, ಪಥ ಸಂಚಲನ, ಸಾಂಸ್ಕೃತಿಕ, ಉಪಾಹಾರ, ಬಹುಮಾನ, ಸ್ವಚ್ಚತೆ ಹಾಗೂ ಕುಡಿಯುವ ನೀರು ಹೀಗೆ ವಿವಿಧ ಉಪ ಸಮಿತಿಗಳು ತಮ್ಮ ತಮ್ಮ ಹಂತದಲ್ಲಿ ಸಮಾಲೋಚನೆ ನಡೆಸಿ ಅ.೨೪ ರೊಳಗೆ ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಕಳೆದ ಬಾರಿಯಂತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲರೂ ಶ್ರಮಿಸಬೇಕು. ಕನ್ನಡಮಯ ವಾತಾವರಣ ನಿರ್ಮಾಣ ಮಾಡಬೇಕು ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಸಿ ಅಂತಿಮಗೊಳಿಸಿ ಮಾಹಿತಿ ನೀಡಲಾಗುವುದು ಎಂದರು.
ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್.ಶೆಟ್ಟಿ, ಪಶುಪಾಲನಾ ಇಲಾಖೆಯ ಉಪ ನಿದೇಶಕ ಲಿಂಗರಾಜ ದೊಡ್ಡಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜ್ಯೋತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ಇತರರು ಇದ್ದರು.