ಜಿಲ್ಲೆಯಲ್ಲಿ ಕಸಾಪ ಸಮ್ಮೇಳನ ನಡೆಸಲು ತೀರ್ಮಾನ

17adarshkdga3
Published on

ಮಡಿಕೇರಿ: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ತಾಲೂಕು ಸಮ್ಮೇಳನ ಮತ್ತು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲಿನಲ್ಲಿ ಜಿಲ್ಲಾ ಸಮ್ಮೇಳನ ನಡೆಸುವಂತೆ ತೀರ್ಮಾನಿಸಲಾಯಿತು.


ಕೊಡಗು ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿಯ ತಾಲೂಕು ಅಧ್ಯಕ್ಷರು, ಹೋಬಳಿ ಅಧ್ಯಕ್ಷರು ಮತ್ತು ವಿಶೇಷ ಆಹ್ವಾನಿತರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.


ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊಡಗು ಜಿಲ್ಲೆಯಿಂದ ೨೫೦ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರನ್ನು ನೋಂದಾಯಿಸಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ಚರ್ಚೆ ನಡೆದು ಪ್ರತಿ ತಾಲೂಕು ಅಧ್ಯಕ್ಷರಿಗೆ ಮತ್ತು ಹೋಬಳಿಯ ಅಧ್ಯಕ್ಷರಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಸದಸ್ಯರನ್ನು ನೋಂದಾಯಿಸಿಕೊಳ್ಳುವಂತೆ ತೀರ್ಮಾನಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಭವನ ಕಟ್ಟುವ ನಿಟಿನಲ್ಲಿ ಈಗಾಗಲೇ ಸಮಿತಿ ರಚನೆ ತಯಾರಿ ನಡೆದಿದ್ದು, ನಕ್ಷೆ ಮತ್ತು ಅಂದಾಜು ಪಟ್ಟಿ ತಯಾರಿಸುವ ಕಾರ್ಯ ಪ್ರಾರಂಭವಾಗಿದೆ ಎಂದು ಅಧ್ಯಕ್ಷರು ಸಭೆಗೆ ಮಾಹಿತಿ ನೀಡಿದರು.


ತಾಲೂಕು ಮತ್ತು ಹೋಬಳಿ ಅಧ್ಯಕ್ಷರು ತಮ್ಮ ಕ್ಷೇತ್ರದಲ್ಲಿ ನಡೆಸಿದ ಕಾರ್ಯಕ್ರಮಗಳ ಮತ್ತು ರಾಜ್ಯೋತ್ಸವ ಆಚರಣೆ ನಡೆಸಿದ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ೨೦೨೧ ೨೨ ನೇ ಸಾಲಿನ ೨೧ ದತ್ತಿ ನಿಧಿ ಕಾರ್ಯಕ್ರಮಗಳು ಜಿಲ್ಲೆಯಾದ್ಯಂತ ನಡೆದಿದ್ದು ೨೨ ೨೩ನೇ ಸಾಲಿನ ೨೭ ಪ್ರತಿನಿಧಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.


ಈ ಸಂದರ್ಭ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಶಾಸಕರು, ಜನಪ್ರತಿನಿಧಿಗಳು, ವಿವಿಧ ಸಂಘಸಂಸ್ಥೆಗಳ ಸಹಕಾರ ಪಡೆದುಕೊಂಡು ಸಮ್ಮೇಳನ ನಡೆಸಬೇಕು ಎಂದರು.


ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್‌ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ನೂತನವಾಗಿ ಆಯ್ಕೆಯಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಇ.ಮೋಹಿದ್ದೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲೂಕು ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ನೂತನ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net