

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲಪೀಡಿತ ಪ್ರದೇಶವೆಂದು ಘೊಷಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದಲ್ಲಿ ವಾಡಿಕೆಗಿಂತ ಶೇ. 70 ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೊಷಿಸಬೇಕು. ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನ ಮಂಜೂರಿ ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಬರಗಾಲ ಪೀಡಿತ ಪ್ರದೇಶಗಳ ಘೊಷಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು. ಹೆಬ್ಬಾರ್ ಕಾಂಗ್ರೆಸ್ ಸೇರುತ್ತಾರೆಂಬ ವದಂತಿ, ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ವದಂತಿಗಳಿಗೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.