ಬರಗಾಲ ಘೋಷಿಸಿ ರೈತರನ್ನು ಕಾಪಾಡಿ

WhatsApp Image 2023-09-08 at 4.59.39 PM
ಬಳ್ಳಾರಿ ನಗರದ ನೂತನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾದ ವತಿಯಿಂದ ಕಾಂಗ್ರೆಸ್ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಾಜಿ ಶಾಸಕ ಸೋಮಶೇಖರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಜಿಲ್ಲಾಧ್ಯಕ್ಷ ಗೋನಾಳ್ ಮುರಹರ ಗೌಡ ಇನ್ನಿತರರಿದ್ದರು.
Published on

ಬಳ್ಳಾರಿ : ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೆ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ 134 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಬೇಕಿತ್ತು. ಆದರೆ ಇದುವರೆಗೂ ಮಾಡಿಲ್ಲ. ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಬರಗಾಲ ಘೋಷಿಸದೆ ಇರುವುದು ಸರಿಯಲ್ಲ ಆದಷ್ಟು ಬೇಗ ಬರಗಾಲ ಘೋಷಿಸಿ ರೈತರನ್ನು ಕಾಪಾಡಬೇಕು ಎಂದರು.

ಕಾಂಗ್ರೆಸ್ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ಕೊಡುವ 4 ಸಾವಿರ ರೂ. ನಿಲ್ಲಿಸಲಾಗಿದೆ. ನೀರಾವರಿ ಯೋಜನೆಗಳನ್ನು ನಿರ್ಲಕ್ಷೃ ಮಾಡಲಾಗಿದೆ. ಎಪಿಎಂಸಿ ಕಾಯ್ದೆಯಿಂದ ಹಿಂಪಡೆದರು, ವಿದ್ಯಾಸಿರಿ ಯೋಜನೆ ನಿಲ್ಲಿಸಿದ್ದಾರೆ ಎಂದು ಟೀಕಿಸಿದರು.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಬಿಜೆಪಿ ಪಕ್ಷದ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರು ಲಿಂಗನ ಗೌಡ ಮತ್ತು ನಗರ ಘಟಕದ ಅಧ್ಯಕ್ಷರಾದ ಸತ್ಯ ನಾರಾಯಣ ಅವರ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಜಿಲ್ಲಾಧ್ಯಕ್ಷ ಗೋನಾಳ್ ಮುರಹರ ಗೌಡ, ಹಿರಿಯ ಮುಖಂಡರಾದ ಹನುಮಂತಪ್ಪ, ರಾಮಲಿಂಗಪ್ಪ, ತಿಮ್ಮಾರೆಡ್ಡಿ, ರಾಜು, ಮಹಿಪಾಲ್ ಸೇರಿದಂತೆ ಮತ್ತಿತರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net