ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ

mng--9 Aug Mohammad Noushad ullanje
Published on

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.


ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಬಂಧಿತ ಆರೋಪಿ. ಕಾಸರಗೋಡು ಜಿಲ್ಲೆಯ ಮೀಯಪದವು ಬಳಿಯಿಂದ ವಶಕ್ಕೆ ಪಡೆದಿದ್ದಾರೆ.


ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಈತನು ಈ ಹಿಂದೆ 2018 ರಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ, ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ, ಕರ್ತವ್ಯದಲ್ಲಿದ್ದ ಪೊಲೀಸರ ಕೊಲೆ ಯತ್ನ ನಡೆಸಿದ ಪ್ರಕರಣ ಹಾಗೂ ಮಹಿಳಾ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿದ್ದನು.


ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್‌ಯವರಾದ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net