17ರಿಂದ ಪದವಿ ಅಂತಿಮ ತರಗತಿ ಆರಂಭ: ಜಿಲ್ಲಾಧಿಕಾರಿ ಜಿ.ಜಗದೀಶ್

jagadeesh
Published on

ಉಡುಪಿ: ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ ಅಗತ್ಯ ಸುರಕ್ಷಾ ಕ್ರಮಗಳೊಂದಿಗೆ ನ.17ರಿಂದ ಅಂತಿಮ ವರ್ಷದ ಪದವಿ ತರಗತಿಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಜಿಲ್ಲೆಯ ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಬಗ್ಗೆ ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ವಿದ್ಯಾರ್ಥಿಗಳು ತಮ್ಮ ಪಾಲಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರದೊಂದಿಗೆ ಕಾಲೇಜಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗಲು ಒಪ್ಪದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದರು. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳು ಪಠ್ಯ ಬಗ್ಗೆ ಸಲಹೆ ಪಡಯಲು ಉಪನ್ಯಾಸಕರನ್ನು ಭೇಟಿಯಾಗಬೇಕಿದ್ದಲ್ಲಿ ವಾರಕ್ಕೊಮ್ಮೆ ಮಾತ್ರ ಕಾಲೇಜಿಗೆ ಬರಬಹುದು.

ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಪಡೆದಿರಬೇಕು. ಕಾಲೇಜಿನ ಎಲ್ಲ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು. ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಧರಿಸಬೇಕು. ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳನ್ನು ಆರಂಭಿಸುವಂತಿಲ್ಲ. ಕೊಠಡಿಯಲ್ಲಿ ಪರಸ್ಪರ ಅಂತರದಲ್ಲಿ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕು. ಅವಶ್ಯವಿದ್ದಲ್ಲಿ ಹೆಚ್ಚುವರಿ ಕೊಠಡಿ ಬಳಸಬೇಕು. ಕಾಲೇಜಿನ ಪ್ರವೇಶ ಮತ್ತು ನಿರ್ಗಮನ ಸ್ಥಳದಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತರಬೇಕು ಎಂದು ಸೂಚಿಸಿದರು.

ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಯಾವ ರೂಟ್‌ಗಳಲ್ಲಿ ಬಸ್‌ನ ಕೊರತೆ ಇದೆ ಎನ್ನುವ ಬಗ್ಗೆ ಮಾಹಿತಿ ನೀಡಿದಲ್ಲಿ, ಆ ರೂಟಿನಲ್ಲಿ ಹೆಚ್ಚುವರಿಯಾಗಿ ಖಾಸಗಿ ಮತ್ತು ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಕಾಲೇಜುಗಳಿಗೆ ಕೋವಿಡ್ ಸುರಕ್ಷತಾ ದೃಷ್ಟಿಯಿಂದ ಅಗತ್ಯ ಉಪಕರಣಗಳನ್ನು ಒಳಗೊಂಡ ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಒದಗಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಡಿಎಚ್‌ಒ ಡಾ.ಸುಧೀರ್ ಚಂದ್ರ ಸೂಡ ಹಾಗೂ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net