

ಮಂಡ್ಯ: ಮಂಡ್ಯ ತಾಲೂಕು ಹಲ್ಲೇಗೆರೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ, ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್‌ನಲ್ಲಿ ಆಗಮಿಸಲಿದ್ದಾರೆ. ಈ ಸಂಬಂಧ ಶೀಘ್ರದಲ್ಲೇ ಅಧಿಕಾರಿಗಳೊಂದಿಗೆ ಸಭೆ ನಡೆಸುವುದರ ಜತೆಗೆ ಕಾರ್ಯಕ್ರಮಕ್ಕೆ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಾರ್ಯಕ್ರಮ ಸಂಬಂಧ ಗುರುವಾರ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದ ನಿಯೋಗದೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ಭೂತಾಯಿ ಟ್ರಸ್ಟ್ ಮಾಡುವ ಒಳ್ಳೆಯ ಕಾರ್ಯಗಳಿಗೆ ನಾವಿದ್ದೇವೆ. ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.
ಮನವಿ ಸಲ್ಲಿಸಿದ ನಿಯೋಗ: ಹಲ್ಲೇಗೆರೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್ ದೀಪ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿತು.
ಭೂತಾಯಿ ಟ್ರಸ್ಟ್ ಅಧ್ಯಕ್ಷ, ಅಮೆರಿಕಾದ ವೈದ್ಯ ಡಾ.ಲಕ್ಷ್ಮೀನರಸಿಂಹಮೂರ್ತಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ರಮೇಶ ಬಂಡಿಸಿದ್ದೇಗೌಡ, ಅಮೆರಿಕಾದ ಅಕ್ಕ ಸಂಸ್ಥೆ ಮಾಜಿ ಅಧ್ಯಕ್ಷ ಶಿವಮೂರ್ತಿ ಕೀಲಾರ ಇತರರಿದ್ದರು.