

ಮಡಿಕೇರಿ: ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಇಲಾಖೆ ಹಂತದ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿರವರ ೧೫ ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಿರುಹೊತ್ತಿಗೆ ಮುದ್ರಣ ಮಾಡಿ ಎಲ್ಲೆಡೆ ವಿತರಿಸಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಅಲ್ಪಸಂಖ್ಯಾತರಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ತಲುಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಮಿತಿ ಸದಸ್ಯ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಕಾರ್ಯಕ್ರಮಗಳು ಇದ್ದು, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ ೫ ತಾಲೂಕುಗಳಲ್ಲಿಯೂ ವಿಶೇಷ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಹ ಕಾರ್ಯದರ್ಶಿ ವಿರಾಜಪೇಟೆಯ ಚಂದ್ರಪ್ರಸಾದ್, ಕೊಡಗು ಜಿಲ್ಲೆಯಲ್ಲಿ ಅತಿರ, ಬಿಕೆಬಿ, ಇಂಟಾನ್ ಭತ್ತ ಬಿತ್ತನೆ ಬೀಜಕ್ಕೆ ಬಹು ಬೇಡಿಕೆ ಇದೆ. ಆದರೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿಕರಿಗೆ ಬೇಕಿರುವ ಭತ್ತ ಲಭ್ಯವಾಗುತ್ತಿಲ್ಲ ಎಂದು ವಿಷಯ ಪ್ರಸ್ತಾಪಿಸಿದರು.
ಮೂರುವರೆ ಅಡಿಗಿಂತ ಹೆಚ್ಚು ಎತ್ತರ ಬೆಳೆಯುವ ಭತ್ತಕ್ಕೆ ಬೇಡಿಕೆ ಇದೆ. ಇದರಿಂದ ಮಳೆಯಿಂದ ರಕ್ಷಣೆ ಜತೆಗೆ ಜಾನುವಾರುಗಳಿಗೆ ಹುಲ್ಲುಗಾಗಿ ಅತಿರ, ಬಿಕೆಬಿ, ಇಂಟಾನ್ ಭತ್ತ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು, ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತ ಬಿತ್ತನೆ ಬೀಜ ದೊರೆಯಬೇಕು ಎಂದು ಮನವಿ ಮಾಡಿದರು.
ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲೆಯಲ್ಲಿ ಬೇಡಿಕೆ ಇರುವ ಭತ್ತ ಬಿತ್ತನೆ ಬೀಜಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸಿ ತರಿಸಿಕೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಕ್, ಜಿಲ್ಲೆಗೆ ಬೇಡಿಕೆ ಇರುವ ಭತ್ತ ಬಿತ್ತನೆ ಬೀಜ ಪೂರೈಕೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್‌ರವರು ಪ್ರಧಾನಮಂತ್ರಿರವರ ೧೫ ಅಂಶ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಅಬ್ದುಲ್ ಲತೀಪ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಇತರರು ಇದ್ದರು.