

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಂಡು ಬಂದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಶಾಸಕ ಟಿ.ಎಸ್.ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮುಡಾದಲ್ಲಿನ ಅಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟವಾಗಿರುವ ಆರೋಪವಿದೆ. ಈ ಬಗ್ಗೆ ಕಳೆದ 2 ತಿಂಗಳಿಂದ ಎಲ್ಲ ಮಾಧ್ಯಮಗಳನ್ನೂ ಚರ್ಚೆಯಾಗುತ್ತಿದೆ. ಹಗರಣದಲ್ಲಿ ಸಂಬಂಧ ಈ ಹಿಂದಿನ ಆಯುಕ್ತರಾದ ಡಿ.ಬಿ.ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜತಗೆ ಹಗರಣದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಬಂಧಿಸಬೇಕು. ಅಂತಹ ಅಧಿಕಾರಿಗಳಿಂದಲೇ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಭರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಶೇ. 50:50 ಅನುಪಾತದಲ್ಲಿ 5 ಲಕ್ಷ ಚದರ ಅಡಿಗೂ ಅಧಿಕ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಇವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದರೂ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.