

ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಸಾತೇನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಬಿ.ವಿ.ಅರುಣ್ ಕುಮಾರ್ ಮೇಲೆ ಗ್ರಾಮ ಪಂಚಾಯಿತಿ ಸದಸ್ಯ ವಿ.ಎನ್.ಯೋಗೇಶ್ ಹಲ್ಲೆ ನಡೆಸಿದ್ದು, ಅವರ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒಗಳು ಮತ್ತು ಪಂಚಾಯಿತಿ ನೌಕರರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಏಕಾಏಕಿ ಪಿಡಿಒ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ, ಸಮಸ್ಯೆ ಇದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದಾಗಿತ್ತು. ಒಬ್ಬ ನೌಕರನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆ ಮಾಡಿದ ವ್ಯಕ್ತಿಯ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿ, ಎಫ್‌ಐಆರ್ ಆಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ತಾಲೂಕಿನ 41 ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ನೌಕರರು ಮತ್ತು ಸಿಬ್ಬಂದಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಹರೀಶ್ ಅವರಿಗೆ ಮನವಿ ಸಲ್ಲಿಸಿದರು.
ಪಿಡಿಒ ಬಿ.ವಿ.ಅರುಣ್‌ಕುಮಾರ್, ಬಸವರಾಜ್ ಇತರರು ಇದ್ದರು.