

ಹನೂರು: ಸುಪ್ರೀಂಕೋರ್ಟ್ ಸಿಜೆ ಮೇಲೆ ಶೂ ಎಸೆಯಲೆತ್ನಿಸಿದ ವಕೀಲನ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಿ ಶಿಕ್ಷೆ ನೀಡಬೇಕು ಎಂದು ರಾಜ್ಯ ಛಲವಾದಿ ಮಹಾಸಭಾದ ಉಪಾಧ್ಯಕ್ಷ ಅಣಗಳ್ಳಿ ಬಸವರಾಜು ಒತ್ತಾಯಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್‌ಕುಮಾರ್ ಶೂ ಎಸೆಯುವ ಪ್ರಯತ್ನ ಮಾಡಿರುವುದು ನಿಜಕ್ಕೂ ಖಂಡನೀಯ. ಆದ್ದರಿಂದ ಸರ್ಕಾರ ಈ ಬಗ್ಗೆ ಕೂಡಲೇ ಎಚ್ಚೆತ್ತು ತಪ್ಪಿತಸ್ಥನಿಗೆ ಶಿಕ್ಷೆಯಾಗಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಹನೂರಿನಲ್ಲಿ ಛಲವಾದಿ ಮಹಾಸಭಾ ಸಂಘಟನೆಯ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಈ ಹಿಂದೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈವರೆಗೂ ಯಾವುದೇ ಕ್ರಮವಾಗಿಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಭವನ ನಿರ್ಮಾಣಕ್ಕೆ ಜಾಗ ನೀಡುವಂತೆ ಒತ್ತಾಯಿಸಿದರು. ಹಾಗೆಯೇ ಮಹಾಸಭಾದ ರಾಜ್ಯಾಧ್ಯಕ್ಷರಾಗಿದ್ದ ಶಿವರಾಮ್ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಪಟ್ಟಣದ ಹೊರವಲಯದ ಎತ್ತಿನಗುಡ್ಡೆಯ ಅರಣ್ಯದಂಚಿನಲ್ಲಿ ಈ ಹಿಂದೆ ಸರ್ಕಾರ ದಲಿತರಿಗೆ ಜಮೀನು ನೀಡಿತ್ತು. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ರೈಲ್ವೆ ಬ್ಯಾರಿಕೇಡ್ ಅಳವಡಿಸಿದ್ದು, ಅನ್ಯಾಯವೆಸಗಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ದಲಿತರಿಗೆ ಸೇರಬೇಕಾದ ಜಮೀನನ್ನು ಬಿಟ್ಟು ಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾದ ತಾಲೂಕು ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಶ್ರೀಕಂಠಮೂರ್ತಿ, ಮುಖಂಡರಾದ ನಾಗಣ್ಣ, ಮಾದೇಶ್, ಮಹೇಶ್, ಕೆಂಪರಾಜು ಹಾಗೂ ಇನ್ನಿತರರು ಇದ್ದರು.