ವಿಜಯಪುರ: ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

Exif_JPEG_420
ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ವಿಜಯಪುರ ನಗರದಲ್ಲಿ ಶಾಸಕ ಶಿವಾನಂದ ಪಾಟೀಲ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಯುವಜನ ಸಂಘಟನೆ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ, ಶ್ರೀಕಾಂತ ಕೊಂಡಗೂಳಿ, ಶಶಿ ಉಪ್ಪಾರ, ಸುನಿಲ ಕಲಗುರ್ಕಿ ಮತ್ತಿತರರಿದ್ದರು.
Published on

ವಿಜಯಪುರ : ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಜಿಲ್ಲೆಯ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಯುವಜನ ಸಂಘಟನೆ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಕರೊನಾ ಸಾಂಕ್ರಾಮಿಕದಂತಹ ವಿಶೇಷ ಸಂದರ್ಭದಲ್ಲೂ ವಯೋಮಿತಿ ಹೆಚ್ಚಿಸದೆ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಆದರೆ ಈ ನೇಮಕಾತಿಯಲ್ಲಿ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿ ವಿಧಾನಸಭೆ ಅಧಿವೇಶನದಲ್ಲಿ ನಿರುದ್ಯೋಗಿ ಯುವಜನರ ಪರವಾಗಿ ಧ್ವನಿ ಎತ್ತಬೇಕೆಂದು ಶಾಸಕರಾದ ಶಿವಾನಂದ ಪಾಟೀಲ ಹಾಗೂ ದೇವಾನಂದ ಚವ್ಹಾಣ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಕರೊನಾ ಕಾರಣವೊಡ್ಡಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳೇ ನಡೆದಿಲ್ಲ. ಹಾಗಾಗಿ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆ ಬಯಸಿದ್ದ ದೊಡ್ಡ ಸಂಖ್ಯೆಯ ಆಕಾಂಕ್ಷಿಗಳು ಈಗ ನಿಗದಿಪಡಿಸಿರುವ ವಯೋಮಿತಿಯನ್ನು ಮೀರಿದ್ದಾರೆ. ಆದ್ದರಿಂದ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಕಳೆದ ಆ.10ರಂದು ರಾಜ್ಯಮಟ್ಟದ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಡಳಿತಕ್ಕೆ, ಜನಪ್ರತಿನಿಧಿಗಳಿಗೆ ಮನವಿಗಳನ್ನು ಕೂಡ ಸಲ್ಲಿಸಲಾಗಿತ್ತು. ಆದರೆ ವಯೋಮಿತಿಯನ್ನು ಹೆಚ್ಚಿಸದೆ ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವೆಸಗಿದೆ. ಬೇರೆ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯು ನಮ್ಮ ರಾಜ್ಯಕ್ಕಿಂತ ಮೂರ್ನಾಲ್ಕು ವರ್ಷಗಳಷ್ಟು ಹೆಚ್ಚಿದೆ. ಆದರೆ ನಮ್ಮ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಸಶಸ ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆಗಳಿಗೆ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಿ ವಯೋಮಿತಿಯನ್ನು ಹೆಚ್ಚಿಸಿ ಹೊಸ ಅಧಿಸೂಚನೆಯನ್ನು ಹೊರಡಿಸಬೇಕೆಂದು ಆಗ್ರಹಿಸಿದರು.

ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯ ಸದಸ್ಯರಾದ ಶ್ರೀಕಾಂತ ಕೊಂಡಗೂಳಿ, ಶಶಿ ಉಪ್ಪಾರ, ಸುನಿಲ ಕಲಗುರ್ಕಿ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net