

ಬೆಳಗಾವಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆ ಪ್ರವೇಶಾತಿಗಾಗಿ ಅರ್ಜಿ ಭರಿಸಲು ಉಪಯೋಗಿಸುವ ಯುಯುಸಿಎಂಎಸ್ ತಂತ್ರಾಂಶದಲ್ಲಿ ಅನೇಕ ದೋಷಗಳಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ತಂತ್ರಾಂಶದಲ್ಲಿ ದೋಷಗಳಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅರ್ಜಿ ಸ್ವೀಕೃತಿಯಾಗದೆ, ಹಣ ಪಾವತಿಯಾದ ಉದಾಹರಣೆಗಳಿವೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಪೇಚೆಗೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಈ ತಂತ್ರಾಂಶ ರದ್ದುಪಡಿಸಬೇಕು. ಇಲ್ಲದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.
ನೂತನ ತಂತ್ರಾಂಶದ ದೋಷದಿಂದಾಗಿ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಪರೀಕ್ಷಾ ಶುಲ್ಕ ಭರಿಸಿ ಮರುಪಾವತಿಯಾಗದೆ ಮತ್ತೊಮ್ಮೆ ದಂಡ ತುಂಬವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಹಿರೇಮಠ, ಎಬಿವಿಪಿ ಮಹಾನಗರ ಕಾರ್ಯದರ್ಶಿ ರವಿ, ಪ್ರಥಮ ಪಾಟೀಲ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.