

ಮಡಿಕೇರಿ: ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧಿಕಾರವಧಿ ಪೂರ್ಣಗೊಂಡು ಒಂದೂವರೆ ವರ್ಷ ಕಳೆದರೂ ನೂತನ ಸಮಿತಿಯನ್ನು ರಚಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಸಮಿತಿಯ ಮಾಜಿ ಸದಸ್ಯ ಹಾಗೂ ನಗರಸಭೆಯ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಜರಾಯಿ ಇಲಾಖೆಗೆ ಒಳಪಡುವ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಅಲ್ಲಿನ ಆಗು ಹೋಗುಗಳ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ. ಆದರೆ ಕಳೆದ ಒಂದೂವರೆ ವರ್ಷದಿಂದ ಆಡಳಿತಾಧಿಕಾರಿಯ ಮೂಲಕ ಆಡಳಿತ ನಡೆಯುತ್ತಿದ್ದು, ಮೂಲಭೂತ ಸೌಲಭ್ಯ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆಯಾಗಿದೆ ಎಂದು ಟೀಕಿಸಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕರು ವ್ಯವಸ್ಥಾಪನಾ ಸಮಿತಿಯ ರಚನೆ ಕುರಿತು ಕಾಳಜಿ ವಹಿಸಬೇಕಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕಾಗಿ ಅವರ ಪಕ್ಷದೊಳಗೆ ಪೈಪೋಟಿ ನಡೆಯುತ್ತಿರುವುದರಿಂದ ಈ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ. ವ್ಯವಸ್ಥಾಪನಾ ಸಮಿತಿ ಇದ್ದರೆ ದೇವಾಲಯ ಮತ್ತು ಭಕ್ತರ ಹಿತ ಕಾಪಾಡುವ ಕಾರ್ಯಗಳು ನಡೆಯುತ್ತದೆ. ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಬಹುದು. ಆದರೆ ಪ್ರತಿದಿನ ಸಾವಿರಾರು ಭಕ್ತರು ಬಂದು ಹೋಗುವ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯೇ ಇಲ್ಲದಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಪ್ರಕಾಶ್ ಆಚಾರ್ಯ, ತಕ್ಷಣ ಸಮಿತಿ ರಚನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ವಿಶೇಷ ಅನುದಾನ ತರಲಿ: ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಶಾಸಕರು ಸರ್ಕಾರದಿಂದ ವಿಶೇಷ ಅನುದಾನ ತರುವ ಪ್ರಯತ್ನ ಮಾಡಲಿ ಎಂದು ಒತ್ತಾಯಿಸಿದ್ದಾರೆ.
ನಗರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಡಿಸೆಂಬರ್ ತಿಂಗಳಿನಲ್ಲಿ ರಸ್ತೆ ಕಾಮಗಾರಿ ಆರಂಭಿಸುವುದಾಗಿ ಶಾಸಕರು ಭರವಸೆ ನೀಡಿದ್ದರಾದರೂ ಇಲ್ಲಿಯವರೆಗೆ ಕಾಮಗಾರಿ ಪ್ರಗತಿ ಸಾಧಿಸಿಲ್ಲ. ಕಾಂಗ್ರೆಸ್ ಆಡಳಿತವಿದ್ದಾಗ ಪ್ರತಿವರ್ಷ ಪ್ರತಿ ವಾರ್ಡ್‌ಗೆ ೧೦ ರಿಂದ ೧೫ ಲಕ್ಷ ರೂ.ಗಳನ್ನು ನಗರಸಭಾ ನಿಧಿಯಿಂದ ಮೀಸಲಿಡಲಾಗುತ್ತಿತ್ತು. ಆದರೆ ಬಿಜೆಪಿ ನೇತೃತ್ವದ ಆಡಳಿತ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಹಣ ಮೀಸಲಿಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ನಗರೋತ್ಥಾನದ ಅನುದಾನ ಸರ್ಕಾರ ಕಡ್ಡಾಯವಾಗಿ ನೀಡಲೇಬೇಕಾದ ಹಣವಾಗಿದ್ದು, ರಾಜ್ಯವ್ಯಾಪಿ ಏಕರೂಪದಲ್ಲಿ ಹಂಚಿಕೆಯಾಗುತ್ತದೆ. ಆದರೆ ಅತಿಹೆಚ್ಚು ಮಳೆಯಾಗುವ ಮಡಿಕೇರಿಗೆ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಪ್ರಕಾಶ್ ಆಚಾರ್ಯ ಒತ್ತಾಯಿಸಿದ್ದಾರೆ.