ಬೆಳೆ ವಿಮೆ ಯೋಜನೆ ಅನುಷ್ಠಾನ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಅಧ್ಯಕ್ಷ ಪ್ರಭಾಕರ ಪ್ರಭು ಒತ್ತಾಯ

crop insurance
Published on

ಬಂಟ್ವಾಳ: ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ತರುವಂತೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಕರ್ನಾಟಕ ಸರ್ಕಾರದ ತೋಟಗಾರಿಕಾ ಸಚಿವರಿಗೆ ಮನವಿ ಮೂಲಕ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ಕರಾವಳಿಯ ಬಹುತೇಕ ಅಡಕೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಹವಾಮಾನ ವೈಪರೀತ್ಯದಿಂದಾಗಿ ನಷ್ಟ ಸಂಭವಿಸಿದ ಸಂದರ್ಭರೈತರ ಬಾಳಿನಲ್ಲಿ ಬೆಳಕು ಚೆಲ್ಲುವ ಯೋಜನೆಯಾಗಿದ್ದು, ವರ್ಷಂಪ್ರತಿ ಸಾವಿರಾರು ರೂ. ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಯಾಗುತ್ತಿದ್ದು, 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಈ ಯೋಜನೆಯನ್ನು ಶೀಘ್ರ ಅನುಷ್ಟಾನಗೊಳಿಸುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಯೋಜನೆಯಡಿ ನೋಂದಣಿಗಾಗಿ ರೈತರಿಗೆ 60 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ಇದರಿಂದಾಗಿ ಸ್ಥಳೀಯ ಪ್ರಾಥಮಿಕ ಸಹಕಾರ ಸಂಘಗಳಿಗೆ ಹೆಚ್ಚಿನ ರೈತರನ್ನು ಯೋಜನೆಗೆ ಒಳಪಡಿಸಲು ಅನೂಕೂಲವಾಗುತ್ತದೆ. ಯೋಜನೆ ಸಂಬಂಧ ರೈತರು ದಿನಂಪ್ರತಿ ಪ್ರಾಥಮಿಕ ಸಹಕಾರ ಸಂಘಗಳ ಕಚೇರಿಗಳಿಗೆ ಸಂಪರ್ಕಿಸಿ ವಿಚಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿ ಶೀಘ್ರವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net