

ವಿಜಯವಾಣಿ ಸುದ್ದಿಜಾಲ ಮಂಗಳೂರು
ಮುಸ್ಲಿಂ ಹೆಣ್ಣುಮಕ್ಕಳ ವಿರುದ್ಧ ಅವಮಾನಕರ ಹೇಳಿಕೆ ನೀಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಈಗಾಗಲೇ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಅವರನ್ನು ಕೂಡಲೇ ಬಂಧಿಸಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷ ಹಾಗೂ ಸಂಘಟನೆಗಳ ಜಂಟಿ ವೇದಿಕೆ ಸರ್ಕಾರವನ್ನು ಒತ್ತಾಯಿಸಿದೆ.
ಇದು ಕೇವಲ ಮುಸ್ಲಿಂ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ವಿಚಾರ ಅಲ್ಲ. ಬದಲಾಗಿ ಸಮಸ್ತ ಸ್ತ್ರೀ ಕುಲಕ್ಕೆ ಅಪಮಾನಕಾರಿಯಾದ ಹೇಳಿಕೆಯಾಗಿದೆ. ಭಟ್ಟರ ಈ ಸ್ತ್ರೀ ವಿರೋಧಿ ಹೇಳಿಕೆಯನ್ನು ಯಾವುದೇ ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಈ ಗಂಭೀರ ವಿಷಯವನ್ನು ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಬೇಕು ಎಂದು ವೇದಿಕೆ ಅಧ್ಯಕ್ಷ ಬಿ.ರಮಾನಾಥ ರೈ ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ದ್ವೇಷ ಭಾಷಣ ವಿಷಯ ಸಂಬಧಿಸಿ ರಾಜಿ ಸಲ್ಲದು ಎನ್ನುವ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಕೂಡ ನೀಡಿದೆ. ಇದು ಬಿಜೆಪಿ ಚುನಾವಣೆಗೆ ಸಿದ್ಧಗೊಳ್ಳುವ ಕ್ರಮ. ಈ ವಿಷಯದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಒತ್ತಾಯಿಸಿದರು.
ಸಿಪಿಐಎಂನ ಕೆ. ಯಾದವ ಶೆಟ್ಟಿ, ಸಿಪಿಐನ ಬಿ.ಶೇಖರ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ.ದೇವದಾಸ್, ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗಡೆ, ರೈತ ಸಂಘದ ಆದಿತ್ಯ ಕಲ್ಲಾಜೆ, ಎಐಟಿಯುಸಿಯ ಕರುಣಾಕರ ಮಾರಿಪಳ್ಳ, ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ವಕೀಲ ದಿನೇಶ್ ಹೆಗ್ಡೆ ಉಳೆಪ್ಪಾಡಿ ಉಪಸ್ಥಿತರಿದ್ದರು.