ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

1 smg 3
ವಿದ್ಯಾರ್ಥಿ ವೇತನ ಬಿಡುಗಡೆಗೆ ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರವೀಣ್, ವಿಧಾತ್ರಿ ಹೆಬ್ಬಾರ್, ಅಭಿಷೇಕ್, ಲೋಹಿತ್, ಸಿಂಚನಾ, ಅಶ್ವತ್ಥ್, ರಘುನಂದನ್ ಇತರರಿದ್ದರು.
Published on

ಶಿವಮೊಗ್ಗ: ವಿದ್ಯಾರ್ಥಿ ವೇತನ ಬಿಡುಗಡೆ ವಿಳಂಬವಾಗುತ್ತಿರುವುದರಿಂದ ಬಡ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷಕ್ಕೆ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಕೂಡಲೆ ಸರ್ಕಾರ 2022-23ನೇ ಸಾಲಿಗೆ ಸಂಬಂಧಿಸಿದ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಕಳೆದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಇದುವರೆಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ಇರುವುದು ದುರದೃಷ್ಟಕರ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮೂರು ಇಲಾಖೆಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದವರು ಮಾತ್ರವಲ್ಲ, ರೈತ ವಿದ್ಯಾರ್ಥಿ ನಿಧಿಗೂ ಅರ್ಜಿ ಸಲ್ಲಿಸಿದವರು ಸಾವಿರಾರು ಮಂದಿ ಇದ್ದಾರೆ. ಇವರಿಗೂ ಹಣ ಬಿಡುಗಡೆಯಾಗಿಲ್ಲ. ಸರ್ಕಾರದ ಈ ಧೋರಣೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣವೇ ಮೊಟಕುಗೊಳ್ಳುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸೀನಪ್ಪ ಶೆಟ್ಟಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕಿ ವಿಧಾತ್ರಿ ಹೆಬ್ಬಾರ್, ಪ್ರಮುಖರಾದ ಪ್ರವೀಣ್, ಅಭಿಷೇಕ್, ಶರಣ್, ಯಶಸ್ವಿನಿ, ಪುನೀತ್, ಧರಣಿ, ಅಶ್ವತ್ಥ್, ಕಾರ್ತಿಕ್, ಅರುಣ್, ರಘುನಂದನ್, ಸಚಿನ್, ಸಿಂಚನಾ, ಲೋಹಿತ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net