ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯ: ಶೋಷಿತ ಸಮುದಾಯದ ಮಹಾ ಒಕ್ಕೂಟದಿಂದ ಮನವಿ

Demand for the implementation of caste census report Mandya
Published on

ಮಂಡ್ಯ: ರಾಜ್ಯ ಹಿಂದುಳಿದ ವರ್ಗದ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಒಕ್ಕೂಟ ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜಾತಿಗಣತಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಮುಂದೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದು, ಇದಕ್ಕೆ ಶಾಸಕರು ಮತ್ತು ಸಚಿವರು ಪಕ್ಷಾತೀತ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಎಲ್ಲ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾ ಮೇಷ ಎಣಿಸುವ ಅಗತ್ಯವಿಲ್ಲ. ಸುಮಾರು 159 ಕೋಟಿ ರೂಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಿ, ಅದರನ್ವಯ ಮುಂದಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಅ.16ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ’ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಡಿ.ದೇವರಾಜ ಅರಸು ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಕೆ.ಎಚ್.ನಾಗರಾಜು, ಎಂ.ಎಲ್.ಸುರೇಶ್, ಸುಂಡಹಳ್ಳಿ ಮಂಜುನಾಥ್, ಎಸ್.ಎನ್.ರಾಜು, ಎನ್.ದೊಡ್ಡಯ್ಯ, ಬೀರಪ್ಪ, ಎಂ.ಎಸ್.ರಾಜಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net