ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಡಲು ಒತ್ತಾಯ

Demand to drop the decision to close Haveri University
Published on

ಹಿರೇಕೆರೂರ: ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವಂತೆ ಆಗ್ರಹಿಸಿ ವಿವಿ ಉಳಿಸಿ ಹೋರಾಟ ಸಮಿತಿಯ ವತಿಯಿಂದ ತಾಲೂಕಿನ ಹಂಸಭಾವಿಯ ಪ್ರವಾಸಿ ಮಂದಿರದಲ್ಲಿ ಶಾಸಕ ಯು.ಬಿ. ಬಣಕಾರ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಹೋರಾಟ ಸಮಿತಿಯ ಮುಖ್ಯಸ್ಥ ಬಸರಾಜ ಪೂಜಾರ ಮಾತನಾಡಿ, ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿರುವ ವಿಶ್ವವಿದ್ಯಾಲಯ ಅವಶ್ಯವಾಗಿದೆ. ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರ್ಕಾರದ ಸಚಿವ ಸಂಪುಟ ಉಪಸಮಿತಿ ತೀರ್ಮಾನ ಕೈಬಿಟ್ಟು, ಯಥಾಸ್ಥಿತಿಯಲ್ಲಿ ವಿಶ್ವವಿದ್ಯಾಲಯ ಉಳಿಸಿ ಅಭಿವೃದ್ಧಿಪಡಿಸಬೇಕು. ವಿಶ್ವವಿದ್ಯಾಲಯಕ್ಕೆ ಯಾವುದೇ ಅನುದಾನ ಬಾರದಿದ್ದರೂ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಗತ್ಯ ಅನುದಾನ ನೀಡಿ ಬಲಪಡಿಸುವ ಬದಲು ವಿಶ್ವವಿದ್ಯಾಲಯ ಮುಚ್ಚುವುದು ಸರಿಯಲ್ಲ. ರಾಜ್ಯ ಸರ್ಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಟ್ಟು, ವಿವಿ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದರು.

ಮನವಿ ಸ್ವೀಕರಿಸಿದ ಶಾಸಕ ಯು.ಬಿ. ಬಣಕಾರ, ಹಾವೇರಿ ವಿವಿ ಉಳಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು. ಹೋರಾಟ ಸಮಿತಿ ಮುಖಂಡರಾದ ಸತೀಶ ಎಂ.ಬಿ., ಪರಿಮಳಾ ಜೈನ, ಹೊನ್ನಪ್ಪ ಮರೆಮ್ಮನವರ, ರೇಣುಕಾ ಗುಡಿಮನಿ, ಜುಬೇದಾ ನಾಯಕ್, ಸಿದ್ದು ಮರೆಮ್ಮನವರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net