

ಗುಂಡ್ಲುಪೇಟೆ: ನದಿಮೂಲದಿಂದ ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಎದುರು ನಡೆಸುತ್ತಿರುವ ಆಹೋರಾತ್ರಿ ಪ್ರತಿಭಟನೆ ಗುರುವಾರ ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ.
ತಾಲೂಕಿನ ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವುದು, ಹಲವಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ನೀಡಲು ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವುದು, ಸಾಗುವಳಿ ನೀಡಿರುವ ರೈತರಿಗೆ ಪಹಣಿ ನೀಡಿ, ಹದ್ದುಬಸ್ತು ದುರಸ್ಥಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೀಪಾವಳಿ ಹಬ್ಬದ ದಿನವೂ ಸರದಿಯಂತೆ ಪ್ರತಿಭಟನೆ ನಡೆಸುವ ಮೂಲಕ ತಮ್ಮ ಬೇಡಿಕೆಗಳ ಈಡೇರಿಗೆ ಒತ್ತಡ ಹೇರುತ್ತಿದ್ದಾರೆ.