ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಲು ಆಗ್ರಹ

Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿಗೆ ಶುಕ್ರವಾರ ಆಗಮಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ರವಾನಿಸಲಾಯಿತು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿಗೆ ಕಿತ್ತೂರ ರಾಣಿ ಚನ್ನಮ್ಮ, ವಿಜಯಪುರಕ್ಕೆ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಬೇಕೆಂದು ಆಗ್ರಹಿಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರ 2023ರಲ್ಲಿಯೇ ಅಧಿವೇಶನದಲ್ಲಿ ಚರ್ಚೆ ನಡೆಸಿ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಆದರೆ, 2 ವರ್ಷಗಳೇ ಕಳೆದರೂ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ಕರ್ನಾಟಕ ರಾಜ್ಯೋತ್ಸವ ಆಚರಣೆಯ ನವೆಂಬರ್ ತಿಂಗಳಲ್ಲಾದರೂ ಕೇಂದ್ರ ಸರ್ಕಾರ, ರಾಜ್ಯಕ್ಕೆ ಸಿಹಿ ಸುದ್ದಿ ನೀಡಬೇಕೆಂದು ಕೋರಲಾಗಿದೆ. ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ತಾಲೂರ, ಅಡಿವೆಪ್ಪ ಶಿವಳ್ಳಿ, ಯಲ್ಲಪ್ಪ ಕುಂದಗೋಳ, ಫಕೀರೇಶ ನಾಯ್ಕರ್, ರಮೇಶ ನಲವಡಿ, ಚಂದ್ರು ಮೂಸೆಪ್ಪನವರ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net