

ಕಲಘಟಗಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಶನಿವಾರ ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಅಧ್ಯಕ್ಷತೆಯಲ್ಲಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕುಂದು ಕೊರತೆ ಸಭೆ ನಡೆಯಿತು. ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆಯೇ ಉಂಟಾಯಿತು.
ಸಭೆ ಆರಂಭವಾಗುತ್ತಿದ್ದಂತೆಯೇ ಸಮಸ್ಯೆ ಹೇಳಿಕೊಂಡ ಸ್ಥಳೀಯರು, ತಾಲೂಕಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಪ್ರಾದೇಶಿಕ ಅರಣ್ಯ ಇಲಾಖೆಯಿಂದ ನೀಡಲಾದ ಸಿಲಿಂಡರ್‌ಗಳ ಸಬ್ಸಿಡಿ ಜಮಾ ಆಗಿಲ್ಲ, ತಾಲೂಕಿನ ಅನೇಕ ಗ್ರಾಪಂಗಳಲ್ಲಿ ಪರಿಶಿಷ್ಟ ಜಾತಿ ಪಂಗಡದ ಹಣ ಸದ್ಬಳಕೆಯಾಗುತ್ತಿಲ್ಲ ಎಂದು ದೂರಿದರು.
ಪಟ್ಟಣದ ಗಾಂಧಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ರಸ್ತೆಗಳು ಹಾಳಾಗಿದ್ದು ಜನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ರಾತ್ರಿ ವೇಳೆ ವಿದ್ಯುತ್ ದೀಪಗಳು ಹತ್ತುತ್ತಿಲ್ಲ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪುಸ್ತಕ ಸಿಗುತ್ತಿಲ್ಲ. ಗ್ರಾಮ ಪಂಚಾಯಿತಿಗಳಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ನೀಡುತ್ತಿಲ್ಲ ಎನ್ನುವ ದೂರುಗಳು ಖೇಳಿ ಬಂದವು. ಅಲ್ಲದೆ, ಪಟ್ಟಣದ ವಡ್ಡರ ಓಣಿ ಜನರಿಗೆ ಮನೆಯ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಲಾಯಿತು.
ಉಗ್ಗಿನಕೇರಿ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಣ ದುರ್ಬಳಕೆಯಾಗಿದ್ದು ಈ ಬಗ್ಗೆ ಮಾಹಿತಿ ಕೇಳಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಚಳಮಟ್ಟಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಸ್ವಚ್ಛತೆ ಮರಿಚಿಕೆಯಾಗಿದೆ, ಇಡೀ ಗ್ರಾಮದ ನೀರು ಕಾಲನಿಯೊಳಗೆ ಹೊಕ್ಕು ಗಬ್ಬು ನಾರುತ್ತಿದೆ ಎಂದು ಸ್ಥಳೀಯ ನಿವಾಸಿ ಮಾದೇವ ಮಾದರ ದೂರಿದರು.
ಕಲಘಟಗಿ ಪಟ್ಟಣದಲ್ಲಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು. ಪಟ್ಟಣದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಪಶು ಇಲಾಖೆಯಲ್ಲಿ ಕುರಿಗಳಿಗೆ ಔಷಧ ನೀಡುತ್ತಿಲ್ಲ, ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮೀನಾಕ್ಷಿ ಗುದಗಿ, ಸಿಪಿಐ ಶ್ರೀಶೈಲ ಕೌಜಲಗಿ, ತಾಪಂ ಇಒ ಪಿ.ವೈ. ಸಾವಂತ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.