

ಗುಂಡ್ಲುಪೇಟೆ: ತಾಲೂಕಿನ ಕೊಡಸೋಗೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಂಕ್ರೀಟ್ ಹಾಕುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಬಸ್ ನಿಲ್ದಾಣದಿಂದ ಹೊರವಲಯದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ ಕೆಆರ್‌ಎಡಿಎಲ್ ಸಂಸ್ಥೆಯು ಮತ್ತೊಬ್ಬ ಗುತ್ತಿಗೆದಾರ ಮೂಲಕ ಚರಂಡಿ ಮತ್ತು ಕಾಂಕ್ರೀಟ್ ರಸ್ತೆಯ ಕೆಲಸ ಮಾಡಿಸುತ್ತಿದೆ. ಆದರೆ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಸಿಸಿ ರಸ್ತೆ ನಿರ್ಮಾಣ ನಡೆಸಲಾಗುತ್ತಿದೆ. ಇದರಿಂದ ರಸ್ತೆಯು ಕಿರಿದಾಗುವುದರಿಂದ ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ ಎದುರಾಗಲಿದೆ. ಅಲ್ಲದೆ ರಸ್ತೆಯ ಬದಿಗಳಲ್ಲಿರುವ ಕಂಬಗಳಿಗೆ ವಾಹನಗಳು ಡಿಕ್ಕಿ ಹೊಡೆಯುವ ಸಂಭವಗಳಿವೆ.
ಈ ಬಗ್ಗೆ ಕೆಆರ್‌ಎಡಿಎಲ್ ಸಂಸ್ಥೆಯ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ. ಸ್ಥಳೀಯ ಗ್ರಾಮ ಪಂಚಾಯಿತಿಯವರಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದ ನಂತರ ರಸ್ತೆಗೆ ಕಾಂಕ್ರೀಟ್ ಹಾಕಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.