ಸುಳ್ಯ: ಅರಂತೋಡು ಗ್ರಾಮದ ಅರಮನೆಗೆ ಸಂಪರ್ಕ ಕಲ್ಪಿಸುವ ತೂಗುಸೇತುವೆ ಅವಘಡ ಸಂಭವಿಸಲು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪಿಸಿದ್ದು ಸೇತುವೆಯನ್ನು ಕೊಡಲೇ ದುರಸ್ತಿಪಡಿಸಿಕೊಡದಿದ್ದರೆ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಅಧಿಕಾರಿಗಳಿಗೆ ನೀಡಲಾದ ಮನವಿಯಲ್ಲಿ ಕಳೆದ 30 ವರ್ಷಗಳಿಂದ ಸಂಬಂಧಪಟ್ಟ ಶಾಸಕರಿಗೆ ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿ ವರ್ಗದವರಿಗೂ ಶಾಶ್ವತವಾಗಿ ಇಲ್ಲಿಗೆ ಹೊಸ ಸೇತುವೆ ನಿರ್ಮಿಸಿ ಕೊಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಪರಿಣಾಮವಾಗಿ ಕಳೆದೆರಡು ದಿನಗಳ ಹಿಂದೆ ತೂಗುಸೇತುವೆಯ ಮೇಲೆ ಸ್ಥಳೀಯ ಮೂವರು ನಿವಾಸಿಗಳು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಸೇತುವೆಯ ರೋಪ್ ತುಂಡಾಗಿ ಕೆಳಗಡೆ ಬಿದ್ದು ಗಾಯಗೊಳ್ಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ ಈ ತೂಗು ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸುವುದರ ಜೊತೆಗೆ ಶಾಶ್ವತವಾಗಿ ಹೊಸ ಸೇತುವೆ ನಿರ್ಮಿಸಿ ಕೊಡಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಅಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ಇದಕ್ಕೆ ಸೂಕ್ತ ಸ್ಪಂದನೆ ದೊರಕದಿದ್ದಲ್ಲಿ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನು ನೀಡಲಾಗಿದೆ.