ಸಂವಿಧಾನ ಪಾಲನೆಯಿಂದ ಪ್ರಜಾಪ್ರಭುತ್ವದ ಗೆಲುವು

26-gdg-5
Published on

ಗದಗ: ಭಾರತೀಯ ಸಂವಿಧಾನವು ಎಲ್ಲರಿಗೂ ಆರು ಮೂಲ ಹಕ್ಕುಗಳು ಹಾಗೂ 11 ಮೂಲ ಕರ್ತವ್ಯಗಳನ್ನು ನೀಡಿದೆ. ಅವುಗಳನ್ನು ಪ್ರತಿಯೊಬ್ಬರೂ ಪಾಲಿಸಿದಾಗ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಬಲಾಢ್ಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವ ಶಕ್ತಿಯನ್ನು ನಮ್ಮ ಸಂವಿಧಾನವು ಹೊಂದಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ನಾಲ್ಕು ವಿಧಾನ ಸಭಾ ಕ್ಷೇತ್ರಗಳ 37 ಗ್ರಾಮ ಪಂಚಾಯಿತಿಗಳಿಗೆ ಅನುಮತಿ ನೀಡಿದ್ದು, ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ 23 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.

ಕೋವಿಡ್-19 ಸೋಂಕಿಗೆ ಪ್ರಥಮ ಹಂತದಲ್ಲಿ ಲಸಿಕೆ ವಿತರಣೆ ಆರಂಭವಾಗಿದ್ದು ಇಲ್ಲಿಯವರೆಗೆ ಶೇ.70ರಷ್ಟು ಸಾಧನೆಯಾಗಿದೆ. ಡಿಸೆಂಬರ್ ಅಂತ್ಯದವರೆಗೆ ಭಾಗ್ಯಲಕ್ಷ್ಮಿ ಯೋಜನೆಯಡಿ 73,831 ಫಲಾನುಭವಿಗಳಿಗೆ ಮಂಜೂರಾತಿ ನೀಡಿದ್ದು, 70970 ಫಲಾನುಭಬಾಂಡ್ ವಿತರಿಸಲಾಗಿದೆ ಎಂದರು.

ಧ್ವಜಾರೋಹಣ ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ದಳಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಶಾಸಕ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ, ವಿಪ ಸದಸ್ಯ ಎಸ್.ವಿ.ಸಂಕನೂರ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net