ಭ್ರಾತೃತ್ವ, ಸ್ವಾತಂತ್ರೃಕ್ಕಾಗಿ ‘ಪ್ರಜಾಪ್ರಭುತ್ವ’ ಗಟ್ಟಿಗೊಳಿಸಬೇಕು: ಶಾಸಕ ತನ್ವೀರ್‌ಸೇಠ್ ಅಭಿಮತ

3
Published on

ಮೈಸೂರು: ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ತನ್ವೀರ್‌ಸೇಠ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಭಾನುವಾರ ಆಯೋಜಿಸಿದ್ದ ಮಾನವ ಸರಪಳಿ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತಿ ದೊಡ್ಡ ದೇಶವಾಗಿದೆ. ಈ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ರಾಜ್ಯದ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸಲಾಗಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮ ಸಂವಿಧಾನ ನೀಡಿದ್ದಾರೆ. ಅದನ್ನು ನಾವೆಲ್ಲರೂ ನಮಗಾಗಿ ಅರ್ಪಿಸಿಕೊಂಡು ಶಾಸನವಾಗಿ ಒಪ್ಪಿಕೊಂಡಿದ್ದೇವೆ. ಕೈಹಿಡಿದು ನಿಲ್ಲುವುದರೊಂದಿಗೆ, ಪರಸ್ಪರ ಸಹಾಯ ಹಸ್ತ ಚಾಚುವುದನ್ನು ಎಲ್ಲರೂ ಮಾಡಬೇಕು ಎಂದರು.
ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮಾನತೆಯನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಒಂದೆಂದು ಕಾಣಬೇಕು. ಎಲ್ಲರ ಹಿತವನ್ನೂ ಕಾಪಾಡಲು ನಾವೆಲ್ಲ ಮುಂದಾಗಬೇಕು ಎಂದು ಹೇಳಿದರು.
ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ಮುಡಾ ಅಧ್ಯಕ್ಷ ಕೆ.ಮರಿಗೌಡ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರವೀಂದ್ರ ಹೆಗಡೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ನ್ಯಾಯಾಧೀಶ ಬಿ.ಜಿ.ದಿನೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net